ಸಾರಾಂಶ
ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತೆ । ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಸೂಚನೆ
ಕನ್ನಡಪ್ರಭ ವಾರ್ತೆ ಮಂಡ್ಯಹೊಸ ವರ್ಷಾಚರಣೆ ಹಿನ್ನೆಲೆ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಭ್ರಮ ಆಚರಿಸುವುದನ್ನು ನಿಷೇದಿಸಲಾಗಿದೆ. ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಪ್ರವಾಸಿ ತಾಣ ಸೇರಿದಂತೆ ವಿವಿಧೆಡೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ತಿಳಿಸಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ, ಮಳವಳ್ಳಿ ಸೇರಿದಂತೆ ವಿವಿಧ ತಾಲೂಕುಗಳಲ್ಲಿನ ಆಯಕಟ್ಟಿನ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.ನಿಷೇಧಾಜ್ಞೆ ಇರುವ ಸ್ಥಳಗಳಲ್ಲಿ ಹೆಚ್ಚಿನ ಜನ ಸೇರುವುದು, ವರ್ಷಾಚರಣೆ ಆಚರಿಸುವುದು ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶ್ರೀರಂಗಪಟ್ಟಣ ತಾಲೂಕಿನ ಕರೀಘಟ್ಟ, ಕಾರೇಕುರ ನದಿ ತೀರಾ, ಸಂಗಂ, ಘೋಸಾಯಿಘಾಟ್, ಕೆಆರ್ ಎಸ್ ನದಿ ತೀರಾ, ಹಿನ್ನೀರು, ವೇಣುಗೋಪಾಲಸ್ವಾಮಿ ದೇವಾಲಯ, ಬಲಮುರಿ, ಪಶ್ಚಿಮವಾಹಿನಿ, ಮಂಡ್ಯ ಕೊಪ್ಪಲು, ಕಾವೇರಿ ಬೋರೇದೇವರ ದೇವಸ್ಥಾನ, ಮಹದೇವಪುರ, ಮಳವಳ್ಳಿ ತಾಲೂಕಿನ ಹಲಗೂರು ಮುತ್ತತ್ತಿ, ಪಾಂಡವಪುರ ತಾಲೂಕಿನ ಎಣ್ಣೆಹೊಳೆಕೊಪ್ಪಲು ಸೇರಿದಂತೆ ವಿವಿಧೆಡೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.ಗರಿಷ್ಠ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಬೆಳಗಿನಿಂದ ಸಂಜೆಯವಯವರೆಗೂ ಭದ್ರತೆಗೆ ನಿಯೋಜಿಸಲಾಗಿದೆ, ರಾತ್ರಿಯೂ ಸಹ ಗಸ್ತು ಹೆಚ್ಚಿಸಲಾಗಿದೆ. ಹೆದ್ದಾರಿ ಸೇರಿದಂತೆ ವಿವಿಧೆಡೆಗಳಲ್ಲಿ ವರ್ಷಾಚರಣೆ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಹೊಟೇಲ್‌ಗಳಿಗೆ ವ್ಯಾಪಾರ ವಹಿವಾಟು ನಡೆಸಲು ಹೆಚ್ಚಿನ ಅವಧಿಗೆ ಅನುಮತಿ ನೀಡಿಲ್ಲ. ನಿಗಧಿತ ಅವಧಿಯೊಳಗೆ ಅಂಗಡಿಗಳನ್ನು ಮುಚ್ಚಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧವೂ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಜಿಲ್ಲೆಯ ಹಲವು ಪ್ರವಾಸಿ ತಾಣಗಳಲ್ಲೂ ಸಹ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ-ಭಂಗವಾಗದಂತೆ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
----------30ಕೆಎಂಎನ್ ಡಿ36
ಜಿಲ್ಲಾ ಎಸ್ಪಿ ಎನ್ .ಯತೀಶ್