ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ತುಮಕೂರುಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊರಟಗೆರೆ ತಾಲೂಕು ಕಚೇರಿ ಸಭಾಂಗಣದಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಂಬಂಧ ಮಂಗಳವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಕೊರಟಗೆರೆ ತಾಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಗಾಗಿ ಕೊರಟಗೆರೆ ತಾಲೂಕಿನಲ್ಲಿ ಒಟ್ಟು 534 ಎಕರೆ ಜಮೀನು ಅಗತ್ಯ ವಿದ್ದು, ಈ ಪೈಕಿ 383 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಾನುಭವಿಗಳ ಖಾತೆಗೆ ಈಗಾಗಲೇ ಹಣವನ್ನು ವರ್ಗಾಯಿಸಲಾಗಿದೆ. ಬಾಕಿ ಉಳಿದಿರುವ ಜಮೀನಿನ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಹೊಸಹಳ್ಳಿ, ಕ್ಯಾಮೇನಹಳ್ಳಿ ಹಾಗೂ ಕಂಬದಹಳ್ಳಿ ಗ್ರಾಮಗಳ ಜಮೀನಿನ ಸಮಗ್ರ ಸರ್ವೆ ನಡೆಸಿ ತಕ್ಷಣವೇ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಭೂಸ್ವಾಧೀನಪಡಿಸಿಕೊಳ್ಳಬೇಕಾದ ರೈತರ ಜಮೀನಿನ ದಾಖಲಾತಿಗಳನ್ನು ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿ ಹಾಗೂ ರಾಜಸ್ವ ನಿರೀಕ್ಷಕರು ಸಂಗ್ರಹಿಸಿ, ಕಾಲಮಿತಿಯೊಳಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಿದರು.ಸಚಿವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ: ಸ್ಥಳಕ್ಕೆ ಡಿಸಿ ಭೇಟಿ, ಪರಿಶೀಲನೆಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ವಾರ ಕೊರಟಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಸಾಧ್ಯತೆಯಿದ್ದು, ಚಾಲನಾ ಕಾರ್ಯಕ್ರಮದ ಸಿದ್ಧತೆಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಸಿದ್ಧವಾಗಿರುವ 13 ಮನೆಗಳ ಹಾಗೂ ಎಸ್‌ಸಿಎಸ್‌ಪಿ(SಅSP) ಅನುದಾನದಡಿ ನಿರ್ಮಾಣಗೊಂಡಿರುವ ಗೋಕುಲ ಆಂಜನೇಯ ದೇವಾಲಯದ ಸಮುದಾಯ ಭವನದ ಉದ್ಘಾಟನೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.ನಂತರ ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಪಾರ್ಕ್ ನಿರ್ಮಾಣದ ನೀಲಿ ನಕ್ಷೆ ಸಿದ್ಧ ಪಡಿಸಿ ಶಂಕುಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಮಂಜುನಾಥ, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.