2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ

| Published : Jul 22 2025, 12:00 AM IST

ಸಾರಾಂಶ

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಜಿಲ್ಲೆಯ ಪಾವಗಡದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಈ ಮೂಲಕ ಸಣ್ಣ ನೀರಾವರಿ ಯೋಜನೆಯಲ್ಲಿ ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸಲಾಗುವುದು. ಅಂತೆಯೇ ಪಾವಗಡದ 23 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಅವರು ತಿಳಿಸಿದರು.ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಪಾವಗಡದ ವಿವಿಧ ಕೆರೆಗಳಿಗೆ ನೀರು ತುಂಬುವ ಮೂಲಕ ಈ ಭಾಗದ ರೈತರ ಬದುಕಿಗೆ ಜೀವ ತುಂಬಬೇಕು ಎಂಬುದು ಸ್ಥಳೀಯ ಜನಪ್ರತಿನಿಧಿಗಳ ಬೇಡಿಕೆ. ಮುಂದಿನ ದಿನಗಳಲ್ಲಿ ಅದನ್ನೂ ಮಾಡುತ್ತೇವೆ ಎಂದೂ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಪಾವಗಡ ಶಾಸಕ ಹಾಗೂ ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಅಧ್ಯಕ್ಷತೆವಹಿಸಿದ್ದರು. ಸಮಾಜಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸದ ಗೋವಿಂದಕಾರಜೋಳ, ಶಾಸಕರಾದ ಡಿ.ಟಿ.ಶ್ರೀನಿವಾಸ್, ಆರ್.ರಾಜೇಂದ್ರ, ಟಿ.ರಘುಮೂರ್ತಿ, ಮಾಜಿ ಸಚಿವ ವೆಂಕಟರಮಣಪ್ಪ, ಬೆಂಗಳೂರು ಕೇಂದ್ರ ವಲಯ ಪೊಲೀಸ್ ಮಹಾನಿರೀಕ್ಷಕ ಲಾಭೂರಾಮ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.