ಶಾಸಕರು, ಮೇಯರ್, ಜಿಲ್ಲಾಧಿಕಾರಿ, ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಗೆ ಸಾಥ್ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಅಂತರಾಷ್ಟ್ರೀಯ ಯೋಗ ದಿನಾಚರಣೆಯಿಂದಾಗಿ ಯೋಗಕ್ಕೆ ಜಾಗತಿಕ ಮನ್ನಣೆ ಸಿಕ್ಕಿದೆ. ವಿಶ್ವದ ಹಲವು ಭಾಗಗಳಲ್ಲಿ ಈ ಯೋಗ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಯೋಗದಿಂದ ಮನಸ್ಸು ಹಾಗೂ ಅರೋಗ್ಯಕ್ಕೂ ಬಹುದೊಡ್ಡ ಲಾಭ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿದ್ದಾರೆ.

ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ಆಯುಷ್ ವಿದ್ಯಾಲಯಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಶುಕ್ರವಾರ ನಗರದ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಎಸ್ಪಿ ರಿಷ್ಯಂತ್, ಪಾಲಿಕೆ ಮೇಯರ್‌ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ವೆನ್ಲಾಕ್‌ ಆಸ್ಪತ್ರೆ ಅಧೀಕ್ಷಕಿ ಡಾ.ಜೆಸಿಂತಾ ಮತ್ತಿತರರಿದ್ದರು.

ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಮುಹಮ್ಮದ್‌ ಇಕ್ಬಾಲ್‌ ಸ್ವಾಗತಿಸಿದರು. ನಿವೃತ್ತ ಅಧಿಕಾರಿ ಡಾ.ದೇವದಾಸ್‌ ನಿರೂಪಿಸಿದರು.

ಬಳಿಕ ಯೋಗ ಗುರು ಡಾ. ಗೋಪಾಲಕೃಷ್ಣ ದೇಲಂಪಾಡಿ ಅವರ ನೇತೃತ್ವದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು. ವಿವಿಧ ಆಯುಷ್ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಸದಸ್ಯರು, ಯೋಗಪಟುಗಳು ಯೋಗ ಪ್ರದರ್ಶನ ನೀಡಿದರು. ವಿಶೇಷವಾಗಿ ಶಾಸಕರು, ಮೇಯರ್, ಜಿಲ್ಲಾಧಿಕಾರಿ, ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಗೆ ಸಾಥ್ ನೀಡಿದರು.