ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಜಿಲ್ಲೆಯಾದ್ಯಂತ ಜೂ.21ರಂದು ಹಮ್ಮಿಕೊಳ್ಳಲಾಗಿರುವ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ.ಕ. ಜಿಲ್ಲಾಡಳಿತ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್. ಘಟಕಗಳು, ವಿವಿಧ ಯೋಗ ಸಂಸ್ಥೆಗಳು ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಮುಖ್ಯ ಕಾರ್ಯಕ್ರಮ ಮಂಗಳೂರಿನ ಪುರಭವನದ ಮಿನಿ ಸಭಾಂಗಣದಲ್ಲಿ ಜೂ.21ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ ಎಂದರು.ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಮಹಿಳಾ ಸಬಲೀಕರಣಕ್ಕಾಗಿ ಯೋಗ” ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಜಿಲ್ಲೆಯ ಪ್ರತಿ ಮನೆಗೂ ಯೋಗದ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂತೋಷ್ ಕುಮಾರ್ ಹೇಳಿದರು.
ನಗರದಲ್ಲಿ ಮುಖ್ಯ ಕಾರ್ಯಕ್ರಮ ನಡೆಯುವ ಮಿನಿ ಸಭಾಂಗಣದಲ್ಲಿ ಈ ಸ್ಪಚ್ಛತಾ ಕಾರ್ಯ, ಕುಡಿಯುವ ನೀರು ಪೂರೈಕೆ ಹಾಗೂ ಶೌಚಾಲಯಗಳ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆ ನಿರ್ವಹಿಸಬೇಕೆಂದು ಸೂಚಿಸಿದರು.ಯೋಗ ಪ್ರದರ್ಶನ ಉತ್ತಮವಾಗಿ ಮೂಡಿಬರಲು ಅನುಕೂಲವಾಗುವಂತೆ ಯೋಗಕ್ಕೆ ಅಗತ್ಯವಿರುವ ಮ್ಯಾಟ್ ಹಾಗೂ ಇತರೆ ಪರಿಕರಗಳನ್ನು ಸಜ್ಜುಗೊಳಿಸಿಕೊಳ್ಳಬೇಕು. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸುವಂತೆ ಹೇಳಿದರು.
ಎಲ್ಲ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಪ್ರತಿನಿತ್ಯ ಮಕ್ಕಳಿಗೆ ಯೋಗ ತರಬೇತಿ ನೀಡಬೇಕು, ಕಲಿಕೆಯ ಜತೆಗೆ ಯೋಗವೂ ಒಂದು ಭಾಗವಾಗಬೇಕು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಮಾತ್ರ ಯೋಗಭ್ಯಾಸವನ್ನು ಸೀಮಿತಗೊಳಿಸಬಾರದು ಎಂದರು.ಜಿಲ್ಲಾ ಆಯುಷ್ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್ ಮಾತನಾಡಿ, ಜಿಲ್ಲೆಯ ಶಾಲೆ ಕಾಲೇಜುಗಳು, ವಸತಿ ಶಾಲೆಗಳು, ಆಯುಷ್ ಆರೋಗ್ಯ ಮಂದಿರಗಳು ಮತ್ತು ಸಂಘ ಸಂಸ್ಥೆಗಳಲ್ಲಿ ಸುಮಾರು 1 ಲಕ್ಷ ಯೋಗಾಸಕ್ತರಿಗೆ ಯೋಗ ತರಬೇತಿಗಳನ್ನು ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಯೋಗೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಜೆಸಿಂತಾ ಡಿಸೋಜ ವೇದಿಕೆಯಲ್ಲಿದ್ದರು. ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಪ್ರಮುಖರು, ಯೋಗಾಸಕ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದ್ದರು.