ಧಾರವಾಡ: ಪ್ರತಿದಿನ ಯೋಗ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿಯಾಗಲಿದೆ. ಉತ್ತಮ ಜೀವನ ನಡೆಸಲು ಯೋಗ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ನಗರದ ಡಾ. ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಧಾರವಾಡ ಜಿಲ್ಲಾ ಆಯುಷ್ ಇಲಾಖೆಯ ರಾಷ್ಟ್ರೀಯ ಆಯುಷ್ ಅಭಿಯಾನ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸೌಟ್ಸ್ ಮತ್ತು ಗೈಡ್ಸ್, ಕೆ.ಎಂ.ಎಫ್., ಎಲ್ಲ ಸರ್ಕಾರಿ ಇಲಾಖೆಗಳು, ಪತಂಜಲಿ ಯೋಗ ಸಮಿತಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಜಿಲ್ಲೆಯ ಯೋಗ ಸಂಸ್ಥೆಗಳು ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದಡಿಯಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಅಪಾರ ಪ್ರಮಾಣದಲ್ಲಿ ಯೋಗಾಸಕ್ತರು ಸೇರಿರುವುದು ಸಂತೋಷದ ವಿಷಯ ಎಂದರು.
ನನ್ನ ತಾಯಿ ಕೂಡ ಸುಮಾರು 15 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದಾರೆ. ವಯಸ್ಸಾದರೂ ಅವರು ಉತ್ತಮ ಆರೋಗ್ಯವನ್ನು ಹೊಂದಿದ್ದಾರೆ. ಉತ್ತಮ ಆರೋಗ್ಯಕರ ಜೀವನವನ್ನು ನಡೆಸಲು ಮುಂದಾಗಬೇಕು. ವಯಸ್ಸಾದ ನಂತರ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅವುಗಳನ್ನು ತಡೆಯಲು ಯೋಗವನ್ನು ರೂಢಿಸಿಕೊಳ್ಳಬೇಕು ಎಂದರು.ಅಂತಾರಾಷ್ಟ್ರೀಯ ಯೋಗ ತಜ್ಞರಾದ ಜಗದೀಶ ಮಳಗಿ, ಇಂದ್ರಾ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಜಯಂತಿ ಯೋಗಾಭ್ಯಾಸ ನಡೆಸಿಕೊಟ್ಟರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಪಂ ಸಿಇಒ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಪರಶುರಾಮ ಎಫ್. ಕೆ., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಎಸ್. ಕಬಾಡೆ, ಎಸ್.ಎಫ್.ಸಿದ್ಧನಗೌಡ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.
ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಅಮೃತಾ ಪಾಸ್ತೆ ಸ್ವಾಗತಿಸಿದರು.