ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ
ದೈಹಿಕ ದೃಢತೆ, ಮಾನಸಿಕ ಆರೋಗ್ಯ, ಭಾವನಾತ್ಮಕ ಸ್ಥಿರತೆ ಹಾಗೂ ಆಧ್ಯಾತ್ಮಿಕ ಸಾಧನೆಯು ಒಂದೇ ಕಡೆ ದೊರಕುವ ಜಗತ್ತಿನ ಏಕೈಕ ಮಾರ್ಗ ಎಂದರೆ ಅದು ಭಾರತೀಯ ಯೋಗ ಜೀವನ ಪದ್ಧತಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಹೇಳಿದರು.ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತವು ವಿಶ್ವಕ್ಕೆ ನೀಡಿರುವ ಅಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು ಪ್ರಮುಖ ಪರಂಪರೆಯಾಗಿದ್ದು, ಅದರ ಮಹತ್ವವನ್ನು ಗುರುತಿಸಿದ ವಿಶ್ವ ಸಂಸ್ಥೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಆಚರಿಸುತ್ತಿದೆ ಎಂದರು.
ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನ ಸಾಧಿಸುವ ಸಮಗ್ರ ಜೀವನಶೈಲಿಯಾಗಿದೆ. ಇಂದಿನ ವೇಗದ ಬದುಕಿನಲ್ಲಿ ಮಾನಸಿಕ ಒತ್ತಡ, ಆತಂಕ ಹಾಗೂ ಆಧುನಿಕ ಜೀವನಶೈಲಿ ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೋಗದ ಅಗತ್ಯ ಇನ್ನಷ್ಟು ಹೆಚ್ಚಾಗಿದೆ. ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಕನಿಷ್ಠ 15 ರಿಂದ 30 ನಿಮಿಷಗಳ ಕಾಲ ಯೋಗಾಭ್ಯಾಸಕ್ಕೆ ಮೀಸಲಿಟ್ಟರೆ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಯೋಗದಿಂದ ದೈಹಿಕ ಸಾಮರ್ಥ್ಯ ವೃದ್ಧಿಯಾಗುವುದರ ಜೊತೆಗೆ ಮಾನಸಿಕ ನೆಮ್ಮದಿ, ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಶಿಸ್ತು ಬೆಳೆಯುತ್ತದೆ. ಯೋಗವು ತಾಳ್ಮೆ, ಸಹನೆ ಮತ್ತು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುತ್ತದೆ. ಕುಟುಂಬದ ಪ್ರತಿಯೊಬ್ಬ ಸದಸ್ಯರು ಯೋಗವನ್ನು ಅಳವಡಿಸಿಕೊಂಡರೆ ಆರೋಗ್ಯಕರ ಕುಟುಂಬ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಯೋಗವನ್ನು ಒಂದು ದಿನದ ಆಚರಣೆಗೆ ಮಾತ್ರ ಸೀಮಿತಗೊಳಿಸದೆ, ಪ್ರತಿನಿತ್ಯದ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡರೆ ಉತ್ತಮ ಆರೋಗ್ಯದ ಜೊತೆಗೆ ಮಾನಸಿಕ ಹಾಗೂ ಆಧ್ಯಾತ್ಮಿಕ ಸಮತೋಲನವೂ ಲಭಿಸುತ್ತದೆ. ಇಂತಹ ಅಭ್ಯಾಸವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಜವಾಬ್ದಾರಿಯುತ ನಾಗರಿಕತೆಯನ್ನು ಬೆಳೆಸಲು ನೆರವಾಗುತ್ತದೆ ಎಂದು ತಿಳಿಸಿದರು.
ಸಿರಿಧಾನ್ಯಗಳ ಮಹತ್ವ: ಆರೋಗ್ಯಕರ ಜೀವನಶೈಲಿಗೆ ಸಿರಿಧಾನ್ಯಗಳ ಬಳಕೆ ಅತ್ಯಂತ ಅಗತ್ಯ, ನಾರಿನಾಂಶ, ಕಬ್ಬಿಣ, ಕ್ಯಾಲ್ಸಿಯಂ ಹಾಗೂ ಅಗತ್ಯ ಪೋಷಕಾಂಶಗಳು ಸಮೃದ್ಧವಾಗಿರುವುದರಿಂದ ಮಧುಮೇಹ, ಸ್ಥೂಲಕಾಯ ಮತ್ತು ಹೃದಯ ಸಂಬಂಧಿ ಸಮಸ್ಯೆಗಳ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ ಸಾರ್ವಜನಿಕರು ತಮ್ಮ ದೈನಂದಿನ ಆಹಾರದಲ್ಲಿ ರಾಗಿ, ನವಣೆ, ಸಜ್ಜೆ, ಸಾಮೆ, ಊದಲು ಮುಂತಾದ ಸಿರಿಧಾನ್ಯಗಳನ್ನು ಸೇರಿಸಿಕೊಳ್ಳಬೇಕು. ಸಿರಿಧಾನ್ಯಗಳ ಬಳಕೆಯಿಂದ ಪೌಷ್ಟಿಕ ಆಹಾರದ ಭದ್ರತೆ ಹೆಚ್ಚುವುದರ ಜೊತೆಗೆ ಪರಿಸರ ಸ್ನೇಹಿ ಕೃಷಿಗೂ ಉತ್ತೇಜನ ಸಿಗುತ್ತದೆ ಎಂದು ತಿಳಿಸಿದರು.
ಯುವಜನರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಯೋಗದ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನದ ಪ್ರಾತ್ಯಕ್ಷಿಕೆಗಳನ್ನು ಒಂದು ಗಂಟೆ ಕಾಲ ನಡೆಸಲಾಯಿತು. ಬಯಲು ಕ್ರೀಡಾಂಗಣದಲ್ಲಿ ಅದ್ಧೂರಿ ವೇದಿಕೆಯನ್ನು ನಿರ್ಮಾಣ ಮಾಡಿ 12ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಮೊಟ್ಟಮೊದಲ ಬಾರಿಗೆ ಅದ್ಧೂರಿಯಾಗಿ ಆಚರಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಯೋಗ ಗುರುಗಳಾದ ಡಾ.ಎನ್. ಲೋಕನಾಥ್, ನಾಗರಾಜ್, ಪತಂಜಲಿ ಯೋಗ ಸಂಸ್ಥೆಯ ಜಿ. ಗೋವಿಂದ್ ಅವರು ಯೋಗ ಮಾಡುವ ವಿಧಾನವನ್ನು ಲಯಬದ್ಧವಾಗಿ ಹಾಗೂ ಪ್ರಾಯೋಗಿಕವಾಗಿ ಹೇಳಿಕೊಟ್ಟರು. ಹಿರಿಯ ದೈಹಿಕ ಶಿಕ್ಷಕ ಮಾರುತಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ. ವೈ. ನವೀನ್ ಭಟ್, ಎಸ್ಪಿ ಕುಶಲ್ ಚೌಕ್ಸೆ, ಎಡಿಸಿ ಡಾ. ಎನ್. ಭಾಸ್ಕರ್, ಎಸಿ ಡಿ. ಎಚ್. ಅಶ್ವಿನ್, ಜಿಪಂ. ಉಪ ಕಾರ್ಯದರ್ಶಿ ಅತಿಕ್ ಪಾಷಾ, ಡಿಎಚ್‌ಒ ಡಾ. ಮಹೇಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ಎಲ್. ಸುಂದರರಾಜ್, ತಹಸೀಲ್ದಾರ್ ರಶ್ಮಿ, ವೀಣಾ ಲೋಕನಾಥ್, ಮುನಿರಾಜು ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಯೋಗ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.
ಸಿಕೆಬಿ-1ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಯೋಗ ಪ್ರದರ್ಶನ ನೀಡಿದರು.