ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಯುವ ಸಮುದಾಯ ಮತ್ತು ಪ್ರಜೆಗಳು ಚುನಾವಣೆ ವೇಳೆ ಕಡ್ಡಾಯವಾಗಿ ಮತದಾನ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ. ರಮಾ ತಿಳಿಸಿದರು.ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಮತದಾನದ ಮಾಡುವುದು ಪ್ರತಿಯೊಬ್ಬರ ಹಕ್ಕು ಹಾಗೂ ಕರ್ತವ್ಯವಾಗಬೇಕು ಎಂದರು.
ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಂತಹ ಕೆಲಸ ಮತದಾನ ಪ್ರಕ್ರಿಯೆಯಾಗಿಗಿದೆ. ಯುವಕರು ಹಾಗೂ ಪ್ರಜೆಗಳು ರಾಷ್ಟ್ರ ಪ್ರೇಮ ಬೆಳೆಸಿಕೊಂಡು ಮತದಾನದ ಮಹತ್ವವನ್ನು ಅರಿತು ಮತದಾನ ಮಾಡಬೇಕು ಎಂದು ತಿಳುವಳಿಕೆ ನೀಡಿದರು.ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ನಗರ ಪ್ರದೇಶದ ಮತದಾರರು ಮತದಾನಕ್ಕೆ ಆಸಕ್ತಿ ತೋರಿಸುತ್ತಿಲ್ಲ. ನಗರ ಮತದಾರರ ಪಾಲ್ಗೊಳ್ಳುವಿಕೆ ಕಡಿಮೆ ಇದೆ. ಆದ್ದರಿಂದ ಪ್ರತಿಯೊಬ್ಬ ಮತದಾರರು ಚುನಾವಣೆ ಪ್ರಾಮುಖ್ಯತೆಯನ್ನು ಅರಿತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಕಳೆದ ಬಾರಿ ಚುನಾವಣೆಯಲ್ಲಿ ನಮ್ಮ ಜಿಲ್ಲೆಯಲ್ಲಿ ಶೇ.82ರಷ್ಟು ಮತದಾನ ಮಾಡಿದ್ದೂ, ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ವಿಷಯ. ಮಂಡ್ಯ ಜಿಲ್ಲೆಯಲ್ಲಿ ಪ್ರಜ್ಞಾವಂತ ನಾಗರೀಕರಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಜಿಲ್ಲೆಯ ಎಲ್ಲಾ ಮತದಾರರು ಸಹ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.ಜ.25 ಭಾರತ ಚುನಾವಣಾ ಆಯೋಗ ಸಂಸ್ಥಾಪನೆಯಾದ ದಿನವಾಗಿದೆ. ಆದ್ದರಿಂದ ಪ್ರತಿವರ್ಷ ಜ.25 ರಂದು ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುವುದು. ಪ್ರಜಾಸತ್ತಾತ್ಮಕ ರಾಷ್ಟ್ರಗಳಲ್ಲಿ ಭಾರತಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಹೇಳಿದರು.
ದೇಶದ ಎಲ್ಲಾ ಪ್ರಜೆಗಳು ಮೂಲ ಹಕ್ಕುಗಳನ್ನು ಪಡೆಯುವ ಮುಂಚೆ ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿಭಾಯಿಸಬೇಕು. ಆಗ ಮಾತ್ರ ಎಲ್ಲಾ ಹಕ್ಕುಗಳನ್ನು ಪಡೆಯುವ ಅಧಿಕಾರವಿರುತ್ತದೆ. ಹಿಂದೆ ಮತದಾನ ಮಾಡಲು ಮತದಾರರಿಗೆ 21 ವರ್ಷ ವಯಸ್ಸಾಗಿರಬೇಕಿತ್ತು. ದೇಶದಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಾದಂತೆ 1979 ರಲ್ಲಿ 21 ರಿಂದ 18 ವರ್ಷಕ್ಕೆ ಸಡಿಲಗೊಳಿಸಲಾಯಿತು. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಲು ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು ಮಾತನಾಡಿ, 14 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷಣೆಯ ಮೂಲಕ ಮತದಾರರಲ್ಲಿ ಪ್ರಜ್ಞೆ ಮೂಡಿಸಬೇಕು ಎಂದರು.
ಇದೇ ವೇಳೆ ಕಳೆದ ವರ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಕಾರ್ಯ ನಿರ್ವಹಿಸಿದ ಉತ್ತಮ ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ಅತ್ಯುತ್ತಮ ಸಂಯೋಜಕರನ್ನು ಅಭಿನಂದಿಸಲಾಯಿತು. ಮೊದಲ ಬಾರಿಗೆ ಮತ ಚಲಾಯಿಸುವ ಜಿಲ್ಲೆಯ ಯುವ ಮತದಾರರು ಹಾಗೂ ವಿಶೇಷ ಚೇತನ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಯಿತು.ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿಸಿದಂತೆ ಪ್ರಬಂಧ ಸ್ಪರ್ಧೆ ( ಕನ್ನಡ, ಆಂಗ್ಲ ಭಾಷೆ), ಭಿತ್ತಿಚಿತ್ರ, ರಸಪ್ರಶ್ನೆಯ ವಿವಿಧ ಸ್ಪರ್ಧೆಗಳನ್ನು ಶಾಲಾ -ಕಾಲೇಜಿನಲ್ಲಿ ಆಯೋಜಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಾಣಿ ಎ.ಶೆಟ್ಟಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಚುನಾವಣಾ ತಹಸೀಲ್ದಾರ್ ವೆಂಕಟಾಚಲಪತಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.