ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿರುವ ಯುವ ಸಂಸತ್ ಕಾರ್ಯಕ್ರಮ ಅತ್ಯಂತ ಅದ್ಭುತವಾಗಿದೆ.

ಜಿಲ್ಲಾ ಮಟ್ಟದ ಯುವ ಸಂಸತ್-೨೦೨೬ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಕೊತ್ತೂರು ಜಿ. ಮಂಜುನಾಥ್ ಸಲಹೆ

ಕನ್ನಡಪ್ರಭ ವಾರ್ತೆ ಕೋಲಾರ

ಸಂಸತ್ತು, ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಲಾಪಗಳು ಕೇವಲ ಚರ್ಚೆ ನಡೆಸುವ ಸ್ಥಳಗಳಲ್ಲ. ಅವು ಜನರ ಧ್ವನಿಗೆ ಸ್ಪಂದಿಸುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪವಿತ್ರ ವೇದಿಕೆಗಳಾಗಿವೆ. ಯುವಜನತೆ ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿ ರೂಪುಗೊಂಡು ರಾಜಕೀಯ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಹಾಗೂ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ಕೋಲಾರ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಾನೂನು ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್-೨೦೨೬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿರುವ ಯುವ ಸಂಸತ್ ಕಾರ್ಯಕ್ರಮ ಅತ್ಯಂತ ಅದ್ಭುತವಾಗಿದೆ. ಸಂಸತ್ತು ಹಾಗೂ ವಿಧಾನಸಭೆಯಲ್ಲಿ ಕಲಾಪಗಳು ನಡೆಯುವ ರೀತಿಯಲ್ಲಿಯೇ ಅತ್ಯಂತ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ರೂಪಿಸಿರುವುದು ಸಂತೋಷದ ವಿಚಾರವಾಗಿದೆ. ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವೈಖರಿ, ಪ್ರಜಾಪ್ರಭುತ್ವದ ಆಶಯಗಳು ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದು ಪ್ರಶಂಸಿಸಿದರು.

ದೇಶದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಎಂಬ ಮೂರು ಪ್ರಮುಖ ಅಂಗಗಳಿವೆ. ಇವುಗಳಲ್ಲಿ ಶಾಸಕಾಂಗದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜನಪ್ರತಿನಿಧಿಗಳು ರೂಪಿಸುವ ಕಾನೂನುಗಳನ್ನು ಕಾರ್ಯಾಂಗ ಜಾರಿಗೊಳಿಸಬೇಕು. ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ತಪ್ಪುಗಳು ಅಥವಾ ಲೋಪದೋಷಗಳು ಕಂಡುಬಂದರೆ ನ್ಯಾಯಾಂಗವು ಸೂಕ್ತ ತೀರ್ಪು ನೀಡುವ ಮೂಲಕ ನ್ಯಾಯ ಒದಗಿಸುತ್ತದೆ. ಈ ಮೂರು ಅಂಗಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗುತ್ತದೆ ಎಂದು ವಿವರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದಿದ್ದರೂ ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ವಿಧಾನಸಭೆ ಮತ್ತು ಲೋಕಸಭೆಯಂತಹ ರಾಜಕೀಯ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಿಗೆ ಪ್ರವೇಶಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು.

ಯುವಕರ ಆಲೋಚನೆ, ಉತ್ಸಾಹ ಮತ್ತು ನಾಯಕತ್ವದ ಗುಣಗಳು ಆಡಳಿತ ವ್ಯವಸ್ಥೆಗೆ ಹೊಸ ದಿಕ್ಕು ನೀಡಬಲ್ಲವು. ಯುವಜನತೆ ರಾಜಕೀಯದಲ್ಲಿ ಪಾಲ್ಗೊಂಡಾಗ ಮಾತ್ರ ದೇಶದಲ್ಲಿ ನೈಜ ಬದಲಾವಣೆ ತರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಹಾಗೂ ಸಂವಿಧಾನದ ಪೀಠಿಕೆಯಲ್ಲಿ ಅಡಕವಾಗಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಇಂದಿನಿಂದಲೇ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯ ಕುರಿತು ಆಳವಾದ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

ಮಾಜಿ ನಗರಸಭಾ ಸದಸ್ಯರಾದ ವೆಂಕಟರಾಮ್, ಮಾಜಿ ನಗರಸಭಾ ಸದಸ್ಯರು ಹಾಗೂ ಹಾಲಿ ಪಿ.ಎಲ್.ಡಿ.ಸಿ ಸದಸ್ಯರಾದ ಅಂಬರೀಶ,ಜಿಲ್ಲಾ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ಶ್ರೀರಾಮ್ ಮತ್ತು ಆನಂದ್, ಪಿ.ಎಲ್.ಡಿ.ಸಿ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ, ದಲಿತ ಸಂಘಟನೆಯ ಮುಖಂಡರಾದ ಪಂಡಿತ್ ಮುನಿಯಪ್ಪ ಮತ್ತು ರಾಮಯ್ಯ, ಹಾಗೂ ಡಿಡಿಪಿಐ ಶ್ರೀಮತಿ ಅಲ್ಮಾಸ್ , ಕ್ಷೇತ್ರ ಶಿಕ್ಷಣಾಧಿಕಾರಿ (ಬಿ.ಇ.ಒ) ಕೆಂಪಯ್ಯ, ಬೆಂಗಳೂರು ವಿಭಾಗದ ದಲಿತ ಸಂಚಾಲಕಿ ಹಾಗೂ ಮಹಿಳಾ ಹೋರಾಟಗಾರ್ತಿ ಡಿ.ಎಸ್.ಎಸ್. ಮಂಜುಳಾ ಮತ್ತು ಜಿಲ್ಲಾ ಕಸಾಪ ಸಮಿತಿಯ ಅಧ್ಯಕ್ಷರಾದ ನಾರಾಯಣಸ್ವಾಮಿ ಇದ್ದರು.