ಹಾವೇರಿ: ಇಂದಿನ ಯುವ ಜನತೆ ಸಮಾಜದಲ್ಲಿ ಹಿರಿಯರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಹಾಗೂ ಹಿರಿಯ ನಾಗರಿಕರ ಸಂರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಅವರು ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅನುಭವ ಮಂಟಪ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಹಿರಿಯರ ಮೇಲಿನ ದೌರ್ಜನ್ಯ ಜಾಗೃತಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು ಹಾಗೂ ಅವರ ಜೀವನದ ಅನುಭವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿರಿಯ ನಾಗರಿಕರು ತಮ್ಮ ಆಪತ್ತಿನ ಪರಿಸ್ಥಿತಿಯಲ್ಲಿ ಹಿರಿಯ ನಾಗರಿಕರ ಇಲಾಖೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಾಯದೊಂದಿಗೆ ನ್ಯಾಯ ಪಡೆದುಕೊಳ್ಳಬಹುದು. ಹಿರಿಯ ನಾಗರಿಕರು ದೌರ್ಜನ್ಯಕ್ಕೆ ತುತ್ತಾದಾಗ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಕಾನೂನಿನ ಸಲಹೆ ಪಡೆಯಬೇಕು. ಪ್ರಾಧಿಕಾರದ ಟೋಲ್ ಫ್ರೀ ನಂ.1500ನ್ನು ಸಂಪರ್ಕಿಸಬಹುದು ಎಂದು ಸಲಹೆ ನೀಡಿದರು.

ಕಾಯಂ ಜನತಾ ನ್ಯಾಯಾಲಯದ ಉಪಯುಕ್ತ ಸೇವೆಗಳು ಹಾಗೂ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾನೂನು ನೆರವು ಅಭಿರಕ್ಷಣಾ ನ್ಯಾಯವಾದಿ ಎನ್.ಎನ್. ಡಿಳ್ಳೆಪ್ಪನವರ ಅವರು ಹಿರಿಯ ನಾಗರಿಕರ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.


ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡ್ರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್, ನಿವೃತ್ತ ಕೃಷಿ ಅಧಿಕಾರಿ ಹಾಗೂ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ಅಣ್ಣಿಗೇರಿ ಇತರರು ಉಪಸ್ಥಿತರಿದ್ದರು.