ಯುವಕರು ಭವ್ಯ ಭಾರತದ ಪ್ರಜೆಗಳು: ಕುಮಾರ ಡಿ.ಕೆ.

| Published : Jan 26 2025, 01:31 AM IST

ಸಾರಾಂಶ

ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಕಾರ್ಯಕ್ರಮ ನಡೆಯಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಕೊಪ್ಪಳ: ಯುವ ಮತದಾರರು ಭವ್ಯ ಭಾರತದ ಪ್ರಜೆಗಳಾಗಿದ್ದು, ಚುನಾವಣೆಗಳ ಸಂದರ್ಭದಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕುಮಾರ್ ಡಿ.ಕೆ. ಹೇಳಿದರು.

ಭಾರತ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು, ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಸಹಯೋಗದಲ್ಲಿ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಪ್ರತಿ ಪ್ರಜೆ-ಪ್ರತಿನಿಧಿ, ತಮ್ಮ ನಾಯಕನನ್ನು ಆಯ್ಕೆ ಮಾಡುವ ಶಕ್ತಿ ತಮ್ಮ ಮತಕ್ಕಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಎಲ್ಲರೂ ಮತದಾನ ಮಾಡಬೇಕು ಎಂಬುದು ಭಾರತ ಚುನಾವಣಾ ಆಯೋಗದ ಧ್ಯೇಯೋದ್ದೇಶವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಅಧ್ಯಕ್ಷತೆವಹಿಸಿ ಮಾತನಾಡಿ, ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದಾಗಿದೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕಾದರೆ ಈ ದೇಶದ ಪ್ರಜೆಗಳ ಪಾತ್ರ ಬಹಳ ಮುಖ್ಯ. ನಮ್ಮ ದೇಶದ ಪ್ರಗತಿ ನಮ್ಮ ನಾಯಕರು ನಿರ್ಧರಿಸಿದರೆ, ಅವರಿಗೆ ನಮ್ಮ ಮತ ನಿರ್ಧರಿಸುತ್ತದೆ. ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದರು.

ನಮ್ಮ ಜಿಲ್ಲೆಯಲ್ಲಿ ಪುರುಷರಿಗಿಂತ ಮಹಿಳೆಯರೆ ಹೆಚ್ಚು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ 17 ಸಾವಿರ ದಿವ್ಯಾಂಗರಿದ್ದಾರೆ. ಹಿಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ 100 ವರ್ಷ ಮೇಲ್ಪಟ್ಟ 227 ಜನ ಮತದಾನ ಮಾಡಿದ್ದಾರೆ. ಈ ವರ್ಷದ ಚುನಾವಣಾ ಆಯೋಗದ ಧ್ಯೇಯವಾಕ್ಯ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬುದಾಗಿದೆ ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಯುವ ಮತದಾರರಿಗೆ ಸಾಂಕೇತಿಕವಾಗಿ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು. ಬೂತ್‌ಮಟ್ಟದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿಎಲ್‌ಒಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮತದಾರರ ದಿನಾಚರಣೆ ಅಂಗವಾಗಿ ವಿವಿಧ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಂಡಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು. ಅತ್ಯುತ್ತಮ ಎಲೆಕ್ಟ್ರೋ ಲಿಟರಸಿ ಕಾಲೇಜಿನ ಮುಖ್ಯಸ್ಥರನ್ನು ಗೌರವಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ದಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಸಿದ್ರಾಮೇಶ್ವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಿ., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ, ಶಾಲಾ-ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಶ್ರೀಶೈಲ ಬಿರಾದಾರ, ಕೊಪ್ಪಳ ತಹಸೀಲ್ದಾರ್‌ ವಿಠ್ಠಲ ಚೌಗಲಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ ಉಪಸ್ಥಿತರಿದ್ದರು.

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬೆಳಗ್ಗೆ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ಶಾಲಾ- ಕಾಲೇಜಿನ 3 ಸಾವಿರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಸೇರಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಅದರಲ್ಲಿ ಭಾರತ ನಕ್ಷೆ, ವಾಯ್ಸ್ ಆಫ್ ಡೆಮಾಕ್ರಸಿ, ಸ್ವೀಪ್‌ ಕೊಪ್ಪಳ ನಿರ್ಮಿಸಿ ಗಮನ ಸೆಳೆದರು.