ಯುವಕರು ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ಕಾರ್ಯವಿಧಾನಗಳ ಕುರಿತು ಅರಿವು ಹೊಂದುವುದು ಅತ್ಯಂತ ಅಗತ್ಯವಾಗಿದೆ ಎಂದು ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಹಾವೇರಿ: ಯುವಕರು ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ಕಾರ್ಯವಿಧಾನಗಳ ಕುರಿತು ಅರಿವು ಹೊಂದುವುದು ಅತ್ಯಂತ ಅಗತ್ಯವಾಗಿದೆ ಎಂದು ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2026ರ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಗೌರವವನ್ನು ಕಲ್ಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶ್ರೀಮಂತ-ಬಡವ, ಅಧಿಕಾರಿ-ಸಾಮಾನ್ಯ ನಾಗರಿಕ ಎಂಬ ಭೇದವಿಲ್ಲದೆ ಪ್ರತಿಯೊಬ್ಬರ ಮತಕ್ಕೂ ಸಮಾನ ಮೌಲ್ಯವಿದೆ. ಗ್ರಾಮ ಪಂಚಾಯಿತಿಯಿಂದ ಕೇಂದ್ರ ಸಂಸತ್ತಿನವರೆಗೆ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆ ವಿಸ್ತರಿಸಿದ್ದು ಜನರ ಪಾಲ್ಗೊಳ್ಳುವಿಕೆ ಮತ್ತು ಆಡಳಿತದಲ್ಲಿ ಪಾರದರ್ಶಕತೆಗೆ ಅವಕಾಶ ಕಲ್ಪಿಸಿದೆ ಎಂದರು.
12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ವಿಚಾರ ವಿನಿಮಯಕ್ಕೆ ವೇದಿಕೆ ಕಲ್ಪಿಸಿದ್ದರು. ಅವರ ವಿಚಾರಧಾರೆಗಳು ಇಂದಿಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮಾದರಿಯಾಗಿವೆ. ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರೊಂದಿಗೆ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಶಾಸಕರಾದ ಬಸವರಾಜ ಶಿವಣ್ಣನವರ, ಪ್ರಕಾಶ ಕೋಳಿವಾಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿಶಾಲ್ ಆರ್., ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ದಲ್ಜೀತ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಲ್. ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಲೇಜುಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
112 ವಿದ್ಯಾರ್ಥಿಗಳಿಂದ ಸದನ ಕಲಾಪ: ಯುವ ಸಂಸತ್ತು ಅಧಿವೇಶನದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಕಾಲೇಜುಗಳಿಂದ ಆಯ್ಕೆಯಾದ ಆಡಳಿತ ಪಕ್ಷದ 82 ಹಾಗೂ ವಿರೋಧ ಪಕ್ಷದ 40 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 112 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಧಾನಸಭೆಯ ಮಾದರಿಯಲ್ಲಿ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಲಾಪಗಳನ್ನು ನಡೆಸಲಾಯಿತು.ಹಾವೇರಿ ವಿಶ್ವವಿದ್ಯಾಲಯದ ಕಲ್ಲನಗೌಡ ದೊಡ್ಡಗೌಡರ ಸಭಾಪತಿಯಾಗಿ, ಹಿರೇಕೆರೂರ ಸರ್ಕಾರಿ ಪದವಿಪೂರ್ವ ಕಾಲೇಜಿನ ಐಶ್ವರ್ಯ ಹದಗಲ ಉಪಸಭಾಪತಿಯಾಗಿ ಹಾವೇರಿಯ ಗಾಂಧಿಪುರ ಕಾಲೇಜಿನ ದಿವ್ಯಾ ಸಹಾನೆ ಮುಖ್ಯಮಂತ್ರಿಯಾಗಿ ಹಾಗೂ ರಾಣಿಬೆನ್ನೂರಿನ ಕಾನೂನು ಕಾಲೇಜಿನ ಗಂಗಾಧರಯ್ಯ ಇಂಗಳಗುಂದಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು. ಸಚಿವ ಸಂಪುಟದಲ್ಲಿ 20 ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆಗಳ ಖಾತೆಗಳನ್ನು ಹಂಚಿಕೆ ಮಾಡಲಾಗಿತ್ತು.
ವಿವಿಧ ವಿಷಯಗಳು ಕುರಿತು ಚರ್ಚೆ: ಪ್ರಶ್ನೋತ್ತರ ಕಲಾಪ, ಶೂನ್ಯ ವೇಳೆ, ನಿಯಮ 69ರ ಅಡಿ ಚರ್ಚೆ, ಗಮನಸೆಳೆಯುವ ಪ್ರಶ್ನೆಗಳು ಹಾಗೂ ವಿಧೇಯಕಗಳ ಮಂಡನೆ ಸೇರಿದಂತೆ ವಿಧಾನಸಭೆಯ ವಿವಿಧ ಕಲಾಪಗಳನ್ನು ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ನಡೆಸಿಕೊಟ್ಟರು. ಶಿಕ್ಷಣ, ಆರೋಗ್ಯ, ಕೃಷಿ, ವಸತಿ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ ಮತ್ತು ನಾಗರಿಕ ಸರಬರಾಜು, ಅರಣ್ಯ, ಸಮಾಜ ಕಲ್ಯಾಣ, ಕಾರ್ಮಿಕ, ಸಾರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಜನಪರ ಸಮಸ್ಯೆಗಳ ಕುರಿತು ಚರ್ಚಿಸಿದರು.ಗ್ರಾಮೀಣ ಭಾಗದ ಪತ್ರಕರ್ತರ ಸಮಸ್ಯೆಗಳು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ಆಡಳಿತ ಪಕ್ಷದ ವಿದ್ಯಾರ್ಥಿಗಳು ಸಚಿವರಾಗಿ ಪ್ರಶ್ನೆಗಳಿಗೆ ಉತ್ತರಿಸಿದರೆ, ವಿರೋಧ ಪಕ್ಷದ ವಿದ್ಯಾರ್ಥಿಗಳು ಸಾರ್ವಜನಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚರ್ಚೆಯಲ್ಲಿ ಪಾಲ್ಗೊಂಡರು.
ಪ್ರಮುಖ ವಿಧೇಯಕಗಳ ಮಂಡನೆ: ಅಧಿವೇಶನದ ಪ್ರಮುಖ ಘಟ್ಟವಾಗಿ ಕರ್ನಾಟಕ ವಿಧಾನಸಭೆಯಲ್ಲಿ ಯುವಕರಿಗೆ ಪ್ರಾತಿನಿಧ್ಯ ಕಾಯ್ದೆ-2026 ವಿಧೇಯಕವನ್ನು ದೀಪಾ ಮರಿಗೌಡ್ರು ಮಂಡಿಸಿದರು. ಕೃತಕ ಬುದ್ಧಿಮತ್ತೆ ಮರುಕೌಶಲ್ಯ ಮಸೂದೆ-2026 ಅನ್ನು ಸುಮಾ ಜಡಿಯಣ್ಣನವರ ಮಂಡಿಸಿದರು. ಎರಡೂ ವಿಧೇಯಕಗಳ ಕುರಿತು ವಿದ್ಯಾರ್ಥಿ ಪ್ರತಿನಿಧಿಗಳು ಚರ್ಚಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಯುವ ಸಂಸತ್ತಿನ ಮೂಲಕ ವಿದ್ಯಾರ್ಥಿಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಜವಾಬ್ದಾರಿ, ಪ್ರಶ್ನಿಸುವ ಮನೋಭಾವ, ಚರ್ಚೆ, ಸಂವಾದ ಹಾಗೂ ಭಿನ್ನಾಭಿಪ್ರಾಯಗಳಿಗೆ ಗೌರವ ನೀಡುವ ಸಂಸದೀಯ ಸಂಸ್ಕೃತಿಯನ್ನು ಪ್ರಾಯೋಗಿಕವಾಗಿ ಅರಿತುಕೊಂಡರು.