ಸಿಎಂ ಗೃಹ ಕಚೇರಿಗೆ ಯುವ ಬಿಜೆಪಿ ಮುತ್ತಿಗೆ ಯತ್ನ

| Published : Sep 26 2024, 10:23 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿಗಳ ಗೃಹ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿಗಳ ಗೃಹ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಬುಧವಾರ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್‌ ಮುನಿರಾಜು ನೇತೃತ್ವದಲ್ಲಿ ಕುಮಾರ ಕೃಪಾ ಅತಿಥಿ ಗೃಹದ ಬಳಿ ಜಮಾಯಿಸಿದ ಯುವ ಮೋರ್ಚಾ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಮಾರ್ಗ ಮಧ್ಯೆಯೇ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಕೆಲ ಕಾಲ ತಳ್ಳಾಟ-ನೂಕಾಟ ನಡೆಯಿತು.

ಪ್ರತಿಭಟನೆ ನಿರೀಕ್ಷೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ ಮತ್ತು ಗೃಹ ಕಚೇರಿ ಕೃಷ್ಣಾ ಬಳಿ ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದರು. ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಮೋರ್ಚಾ ಕಾರ್ಯಕರ್ತರನ್ನು ಕುಮಾರ ಕೃಪಾ ಅತಿಥಿ ಗೃಹದ ಬಳಿಯೇ ತಡೆದು ವಶಕ್ಕೆ ಪಡೆದು ಬಿಎಂಟಿಸಿ ಬಸ್‌ಗಳಲ್ಲಿ ಕರೆದೊಯ್ದರು.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ:

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಧೀರಜ್‌ ಮುನಿರಾಜು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಆರೋಪಿ ಸ್ಥಾನದಲ್ಲಿ ಇರುವುದರಿಂದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಇದ್ದರೆ, ನ್ಯಾಯಾಲಯದ ಆದೇಶ ಪ್ರಕಟವಾಗುತ್ತಿದ್ದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಯಾವುದೇ ಕಾರಣಕ್ಕೂ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದರು.

ಬೇರೆಯವರ ನೈತಿಕತೆ ಬಗ್ಗೆ ಮಾತನಾಡುವ ಸಿದ್ಧರಾಮಯ್ಯ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತಮ್ಮ ನೈತಿಕತೆ ಉಳಿಸಿಕೊಳ್ಳಬೇಕು. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಬಗ್ಗೆ ಮಾತನಾಡುವ ಸಿದ್ಧರಾಮಯ್ಯ ಈಗ ತಮ್ಮ ಬುಡಕ್ಕೆ ಬೆಂಕಿ ಬಿದ್ದಾಗ ಕಾನೂನಿನ ಬಗ್ಗೆ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಕೂಡಲೇ ಸಿದ್ಧರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್‌, ಉಪಾಧ್ಯಕ್ಷ ಮಾಲತೇಶ್‌, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಅಭಿಲಾಷ್‌ ರೆಡ್ಡಿ ಸೇರಿದಂತೆ ಹಲವು ಯುವಮೋರ್ಚಾ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.