ಸಾರಾಂಶ
ಬಿಜೆಪಿ ನೇತೃತ್ವದ ಕೇಂದ್ರ ಎನ್‌ಡಿಎ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಇದರ ಬಗ್ಗೆ ಹೋರಾಟ ಮಾಡಬೇಕಾದ ಬಿಜೆಪಿ ಪಕ್ಷದ ಕಾರ್ಯಕರ್ತರು,ಕಾಂಗ್ರೆಸ್ ವಿರುದ್ಧ ಜನಾಕ್ರೋಶಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ, ಇಂತಹ ಜನ ವಿರೋಧಿ ನೀತಿಯು ಜನರ ಹಾದಿ ತಪ್ಪಿಸುವ ತಂತ್ರ.
ಕನ್ನಡಪ್ರಭ ವಾರ್ತೆ ಮಂಡ್ಯ
ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಮಂಡ್ಯದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಜಿಲ್ಲಾ ಯುವ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಅಡುಗೆ ಅನಿಲ ಸಿಲಿಂಡರ್‌ಗಳನ್ನು ತಲೆ ಮೇಲೆ ಹೊತ್ತು ಸೌದೆ ಒಲೆ ಉರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಎನ್‌ಡಿಎ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಇದರ ಬಗ್ಗೆ ಹೋರಾಟ ಮಾಡಬೇಕಾದ ಬಿಜೆಪಿ ಪಕ್ಷದ ಕಾರ್ಯಕರ್ತರು,ಕಾಂಗ್ರೆಸ್ ವಿರುದ್ಧ ಜನಾಕ್ರೋಶಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ, ಇಂತಹ ಜನ ವಿರೋಧಿ ನೀತಿಯು ಜನರ ಹಾದಿ ತಪ್ಪಿಸುವ ತಂತ್ರ ಎಂದು ಟೀಕಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ೨ ರು. ಹಾಗೂ ಅಡುಗೆ ಅನಿಲದ ದರವನ್ನು ೫೦ ರು. ಹೆಚ್ಚಳ ಮಾಡಿದೆ ಬಿಜೆಪಿ ಮುಖಂಡರು ಬೆಲೆ ಹೆಚ್ಚಳವನ್ನು ಸಮರ್ಥನೆ ಮಾಡುತ್ತಿರುವುದು ವಿಷಾದಕರ ಸಂಗತಿಯಾಗಿದೆ. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ನಮ್ಮ ತೆರಿಗೆ ಪಾಲನ್ನು ನೀಡದೆ ದ್ವೇಷದ ರಾಜಕಾರಣ ಮಾಡುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಕೆ ಕಂಡಿದ್ದರೂ ದೇಶದಲ್ಲಿ ಇಂಧನದ ಬೆಲೆ ಹೆಚ್ಚಳ ಮಾಡಿರುವುದು ಮೋದಿ ಸರ್ಕಾರದ ದುರಾಡಳಿತ ಎಂದು ಆಕ್ರೋಶಿಸಿದರು.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಂದ್ರಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ವಿ.ನಾಗರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಿತ್ರ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುನಿಲ್, ಗುರುಕುಮಾರ್, ಕನ್ನಲಿ ಚನ್ನಪ್ಪ, ಎಚ್.ಎಂ.ಉದಯ್‌ಕುಮಾರ್, ಚಿನಕುರಳಿ ರಮೇಶ್, ಅಭಿಲಾಷ್,ಮಂಜು, ದ್ಯಾವಣ್ಣ, ವೀಣಾಶಂಕರ್ ಪಾಲ್ಗೊಂಡಿದ್ದರು.