ಪ್ರಧಾನಿ ನರೇಂದ್ರ ಮೋದಿಯವರ ನಿವಾಸದ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಮಂಜುನಾಥ ಗೌಡ ನೇತೃತ್ವದಲ್ಲಿ ಲೋಕಭವನದ ಮುಂದೆ ಮಂಗಳವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಧಾನಿ ನರೇಂದ್ರ ಮೋದಿಯವರ ನಿವಾಸದ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಮಂಜುನಾಥ ಗೌಡ ನೇತೃತ್ವದಲ್ಲಿ ಲೋಕಭವನದ ಮುಂದೆ ಮಂಗಳವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ, ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಅನ್ನು ಖಂಡಿಸಿ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿತ್ತು. ರಾಹುಲ್ ಗಾಂಧಿಯವರನ್ನು ನೇರವಾಗಿ ಎದುರಿಸಲಾಗದ ಹೇಡಿ ಮೋದಿ ಸರ್ಕಾರ ಪೊಲೀಸರನ್ನು ಬಿಟ್ಟು ವಶಕ್ಕೆ ಪಡೆಯುವ ಕುತಂತ್ರಕ್ಕೆ ಮುಂದಾಗಿದೆ’ ಎಂದು ಕಿಡಿಕಾರಿದರು.
ಒಮ್ಮೆ ಬಿಜೆಪಿ ನಾಯಕರು ಚರಿತ್ರೆಯ ಪುಟಗಳನ್ನು ತಿರುವಿ ಹಾಕಲಿ. ಓದಲು ಕಷ್ಟವಾದರೆ, ವಿದ್ಯಾವಂತರ ಬಳಿ ಓದಿಸಿ ತಿಳಿಯಲಿ. ರಾಹುಲ್ ಗಾಂಧಿಯವರ ತಾತ, ಮುತ್ತಜ್ಜನವರು ದೇಶಕ್ಕಾಗಿ ಜೈಲಿಗೆ ಹೋದದ್ದು ಇತಿಹಾಸ. ರಾಹುಲ್ ಗಾಂಧಿಯವರು ಇಂತಹ ಹೇಡಿ ಕೃತ್ಯಗಳಿಗೆ ಹೆದರುತ್ತಾರೆ ಎಂದುಕೊಳ್ಳುವುದು ಮೂರ್ಖತನ. ಅವಿದ್ಯಾವಂತರ ಕೂಪವಾದ ಮೋದಿ ಸರ್ಕಾರಕ್ಕೆ ತಾಕತ್ತಿದ್ದರೆ ರಾಹುಲ್ ಗಾಂಧಿಯವರನ್ನು ನೇರವಾಗಿ ಎದುರಿಸಲಿ ಎಂದು ಸವಾಲು ಹಾಕಿದರು.ಕೇಂದ್ರದ ಕುಮ್ಮಕ್ಕು:ದೆಹಲಿಯಲ್ಲಿ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಮಫ್ತಿಯಲ್ಲಿದ್ದ ಪೊಲೀಸರು ಗಲಾಟೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಕೇಂದ್ರ ಸರ್ಕಾರ ಕುಮ್ಮಕ್ಕು ನೀಡಿದೆ. ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿ ರಕ್ತ ಬರುವಂತೆ ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿ ಪ್ರತಿಭಟಿಸುತ್ತಿದ್ದ ರಾಹುಲ್ ಗಾಂಧಿ ಅವರನ್ನು ಬಂಧಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅವಿದ್ಯಾವಂತ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಶಿಕ್ಷಣ ಸಚಿವ ಸ್ಥಾನಕ್ಕೆ ಯೋಗ್ಯವಲ್ಲದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಡ್ಡಾಯವಾಗಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಹಾಕಿರುವ ಎಫ್‌ಐಆರ್ ಹಿಂಪಡೆಯಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.ಈ ವೇಳೆ ಕೈಪಿವೈಸಿಸಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ನೂರಾರು ಮಂದಿ ಜಮಾಯಿಸಿದ್ದರು. ಪ್ರತಿಭಟನೆಯನ್ನು ತಹಬದಿಗೆ ತರಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.