ಸಂಸತ್ತು ವಿಧಾನಮಂಡಲದ ಕಲಾಪಗಳು ಹಾಗೂ ಕಾರ್ಯ ವೈಖರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ಯುವ ಸಂಸತ್ ಸಭೆಯನ್ನು ವಿದ್ಯಾರ್ಥಿಗಳಿಗಾಗಿಯೇ ಆಯೋಜಿಸಲಾಗುತ್ತಿದೆ ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಂಸತ್ತು ವಿಧಾನಮಂಡಲದ ಕಲಾಪಗಳು ಹಾಗೂ ಕಾರ್ಯ ವೈಖರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ಯುವ ಸಂಸತ್ ಸಭೆಯನ್ನು ವಿದ್ಯಾರ್ಥಿಗಳಿಗಾಗಿಯೇ ಆಯೋಜಿಸಲಾಗುತ್ತಿದೆ ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ನೂತನ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಯುವ ಸಂಸತ್ತು ಸಭೆ ಉದ್ಘಾಟಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಶ್ರೇಷ್ಠ ಸಂವಿಧಾನವನ್ನು ನಮಗೆ ನೀಡಿದ್ದಾರೆ. ಸಂಸತ್ತು ವಿಧಾನಮಂಡಲದಲ್ಲಿ ನಡೆಯುವ ಆರೋಗ್ಯಕರ ಚರ್ಚೆಗಳು ದೇಶದ ಅಭಿವೃದ್ಧಿಗೆ ಪೂರಕವಾದ ನಿರ್ಧಾರಗಳು ಹೊರಬರಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈಗಿನಿಂದಲೇ ಸಂಸತ್ತು ವಿಧಾನಮಂಡಲದ ಕಾರ್ಯವೈಖರಿ ಹಾಗೂ ರಾಜಕೀಯ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಬೇಕು. ಹೀಗಾಗಿಯೇ ಯುವ ಸಂಸತ್ತು ಸಭೆಯಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.ವಿದ್ಯಾರ್ಥಿಗಳು ಹೆಚ್ಚು ಪುಸ್ತಕಗಳನ್ನು ಓದುವ ಮೂಲಕ ಜ್ಞಾನಾರ್ಜನೆ ಮಾಡಿಕೊಳ್ಳಬೇಕು. ಅನವಶ್ಯಕವಾಗಿ ಮೊಬೈಲ್ ಬಳಕೆ ಮಾಡಬಾರದು. ಉತ್ತಮ ಜ್ಞಾನ, ಅರಿವು ಹೆಚ್ಚಿಸಿಕೊಳ್ಳುವುದಕ್ಕೆ ಮೊಬೈಲ್ ಬಳಕೆಯಾಗಬೇಕು ಎಂದು ಕಾಡಾ ಅಧ್ಯಕ್ಷರಾದ ಮರಿಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಶ್ರೀರೂಪ ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಅರಿವು ಮೂಡಿಸುವ ಮಹತ್ವದ ವೇದಿಕೆಯಾಗಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಮತದಾನದ ಹಕ್ಕನ್ನು ನೀಡಿದೆ. ಪ್ರತಿಯೊಬ್ಬ ನಾಗರಿಕರ ಧ್ವನಿಗೂ ಗೌರವ ನೀಡುವುದು ಪ್ರಜಾಪ್ರಭುತ್ವದ ಮುಖ್ಯ ಆಶಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಕೆ. ರವಿಕುಮಾರ್, ಯುವಸಂಸತ್ತು ಯುವಜನರಿಗೆ ಪ್ರಜಾಪ್ರಭುತ್ವದ ವ್ಯವಸ್ಥೆ, ಸಂಸತ್ತಿನ ಕಾರ್ಯವೈಖರಿ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ವೇದಿಕೆಯಾಗಿದೆ. ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇದರ ನಿರ್ಮಾಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು ಸೇರಿದಂತೆ ಅನೇಕ ಮಹನೀಯರ ತ್ಯಾಗ ಮತ್ತು ಪರಿಶ್ರಮವಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ದೇಶದ ಕಾನೂನುಗಳನ್ನು ತಿಳಿದುಕೊಳ್ಳುವುದು ಕರ್ತವ್ಯವಾಗಿದೆ. ಕಾನೂನಿನ ಅರಿವಿಲ್ಲ ಎಂಬ ಕಾರಣಕ್ಕೆ ಯಾರಿಗೂ ವಿನಾಯಿತಿ ಇರುವುದಿಲ್ಲ. ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಹಾಗೂ ಸಂಸದೀಯ ವ್ಯವಸ್ಥೆಯ ತಿಳಿವಳಿಕೆಯನ್ನು ಬೆಳೆಸುವ ಉದ್ದೇಶ ಹೊಂದಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವಣ್ಣನವರ ಪ್ರತಿಮೆಗಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ವಿದ್ಯಾರ್ಥಿಗಳಿಂದಲೇ ನಡೆದ ಯುವ ಸಂಸತ್ತು ಸಭೆ ಅರ್ಥಪೂರ್ಣವಾಗಿ ಮೂಡಿಬಂದು ಗಮನ ಸೆಳೆಯಿತು.

ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸೋಮೇಶ್ವರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮೇಘ ಕಾರ್ಯಕ್ರಮದಲ್ಲಿ ಹಾಜರಿದ್ದರು.