2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವುದು ಪ್ರಧಾನಮಂತ್ರಿಯವರ ಆಶಯವಾಗಿದೆ. ಸ್ವಾತಂತ್ರ‍್ಯದ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಈ ಕನಸು ನನಸಾಗಬೇಕಾದರೆ ಯುವಜನರು ರಾಷ್ಟ್ರದ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್ ಹೇಳಿದರು.

ಮಡಿಕೇರಿ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವುದು ಪ್ರಧಾನಮಂತ್ರಿಯವರ ಆಶಯವಾಗಿದೆ. ಸ್ವಾತಂತ್ರ‍್ಯದ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಈ ಕನಸು ನನಸಾಗಬೇಕಾದರೆ ಯುವಜನರು ರಾಷ್ಟ್ರದ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್ ಹೇಳಿದರು. ಭಾರತ ಸರ್ಕಾರ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ಕೇಂದ್ರ ಕೊಡಗು ಹಾಗೂ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಯುವಜನರಲ್ಲಿ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದಲ್ಲಿ ‘ವಿಕಸಿತ ಭಾರತ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಮಾತನಾಡಿದರು. ಯೌವನವೆಂಬುದು ಕೇವಲ ವಯಸ್ಸಿಗೆ ಸಂಬಂಧಿಸಿದ್ದಲ್ಲ, ಅದೊಂದು ಮನೋಭಾವವಾಗಿದೆ. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರೊಂದಿಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ, ನಡವಳಿಕೆಯನ್ನು ಸುಧಾರಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಮೈ ಭಾರತ್ ಕೊಡಗು ಜಿಲ್ಲಾ ಯುವಜನ ಅಧಿಕಾರಿ ಪಿ.ಅಖಿಲ್ ಅವರು ಮಾತನಾಡಿ, ಯುವಜನರ ಸಹಭಾಗಿತ್ವದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ಹೊಸ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಭಾರತ ಸರ್ಕಾರವು ‘ಮೇರಾ ಯುವ ಭಾರತ್’ ಪರಿಕಲ್ಪನೆಯನ್ನು ಜಾರಿಗೊಳಿಸಿದೆ. ಇದರಡಿ ರಾಷ್ಟ್ರ ನಿರ್ಮಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಜ್ಞಾನ, ಕ್ರೀಡೆ ಹಾಗೂ ಭಾಷಣ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ಮತ್ತು ಯುವಜನರ ಆಲೋಚನೆಗಳನ್ನು ಸಂಗ್ರಹಿಸಲಾಗುತ್ತಿದೆ. ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಿಗಳು 2027ರ ಜನವರಿ 10 ರಿಂದ 12 ರವರೆಗೆ ನವದೆಹಲಿಯ ಸಂಸತ್ತಿನಲ್ಲಿ ತಮ್ಮ ಆಲೋಚನೆಗಳನ್ನು ಮಂಡಿಸಲು ಅವಕಾಶ ಪಡೆಯಲಿದ್ದಾರೆ ಎಂದರು.

ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಂದೆ- ತಾಯಿ, ಗುರು- ಹಿರಿಯರು ಹಾಗೂ ಶಿಕ್ಷಕರನ್ನು ಗೌರವಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ವಕೀಲರಾದ ಕೆ.ಎಂ.ಮೀನಾಕುಮಾರಿ ಮಾತನಾಡಿ, ಸ್ಪರ್ಧೆಯಲ್ಲಿ ಗೆಲುವು ಅಥವಾ ಸೋಲು ಮುಖ್ಯವಲ್ಲ, ಭಾಗವಹಿಸುವಿಕೆ ಅತ್ಯಂತ ಮುಖ್ಯ ಎಂದರು.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಯುವ ನಾಯಕರು ಭಾಗವಹಿಸಿ, ರಾಷ್ಟ್ರದ ಅಭಿವೃದ್ಧಿ ಮತ್ತು ಸಮಕಾಲೀನ ವಿಚಾರಗಳ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು.

ತೀರ್ಪುಗಾರರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ನವೀನ್ ಕುಮಾರ್, ಆಂಗ್ಲ ಉಪನ್ಯಾಸಕಿ ಅನನ್ಯ ಮಧುಸೂದನ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕಿ ಕೆ.ಎಚ್. ಖುರ್ಷಿದಾ ಬಾನು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಎಂ.ಬಿ.ದೀಪ ಕಾರ್ಯನಿರ್ವಹಿಸಿದರು.ಪೊನ್ನಂಪೇಟೆಯ ಸಿಐಟಿ ಕಾಲೇಜಿನ ವಿದ್ಯಾರ್ಥಿನಿ ಅದ್ವಿಕಾ ಪ್ರಥಮ ಸ್ಥಾನ ಗಳಿಸಿದರೆ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿನಿ ಎಂ.ಐ.ಶಬೀಬ ದ್ವಿತೀಯ ಹಾಗೂ ಪೊನ್ನಂಪೇಟೆಯ ಸಿಐಟಿ ಕಾಲೇಜಿನ ಕೆ.ಆರ್. ಬವಿತ ತೃತೀಯ ಸ್ಥಾನ ಪಡೆದು, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ವಿ.ವಿ.ಶಿವಪ್ಪ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಕೆ. ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕಿ ಪಿ.ಆರ್. ಮುಕ್ತಕೇಶಿ ವಂದಿಸಿದರು.