ಸಾರಾಂಶ
ಯಾದಗಿರಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಯುವಕರು ಉತ್ತಮ ಆರೋಗ್ಯಕರ ಚಟುವಟಿಕೆಗಳಲ್ಲಿ ತೊಡಗಿ ಸಮಾಜಕ್ಕೆ ಉನ್ನತವಾದ ಕೊಡುಗೆ ನೀಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಹೇಳಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ "ವಿಶ್ವ ತಂಬಾಕು ರಹಿತ "ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಯುವ ಪೀಳಿಗೆ ಹೆಚ್ಚಾಗಿ ತಂಬಾಕು ಸೇವನೆ ಚಟಕ್ಕೆ ತುತ್ತಾಗುತ್ತಿದ್ದು, ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಯವಕರು ಅರಿತುಕೊಳ್ಳಬೇಕೆಂದು ತಿಳಿಸಿದರು.ಸಂಪನ್ಮೂಲ ವ್ಯಕ್ತಿಗಳಾದ ಡಾ.ಎಂ.ಎಸ್.ಪಾಟೀಲ್ ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್, ಗ್ಯಾಂಗ್ರೀನ್, ಬಿಪಿ, ಶುಗರ್, ಟಿಬಿ, ತಲೆಕೂದಲು ಉದುರುವಿಕೆ, ಅವಧಿ ಪೂರ್ವ ಮಗುವಿನ ಜನನ ಮುಂತಾದ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಡಿಯಲ್ಲಿ ಇರುವ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಸಿಗುವ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಧೀಶರಾದ ಅರುಣ ಚೌಗುಲೆ, ಹೆಚ್ಚುವರಿ ಸಿವಿಲ್ ನ್ಯಾಯಧೀಶ ರಾಹುಲ್ ಚಾಂಬರ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಮಾಲಿಪಾಟೀಲ್, ಕಾರ್ಯದರ್ಶಿ ಶಾಂತಪ್ಪ ಜಾಧವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಸೇರಿದಂತೆ ಇತರರಿದ್ದರು.