ಯುವಕರು ಮಾದಕ ವ್ಯಸನಿಗಳಾಗದಿರಿ: ಸೆಲ್ವಿಕುಮಾರಿ

| Published : Mar 27 2024, 01:00 AM IST

ಸಾರಾಂಶ

ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ.ಗುಂಡಪ್ಪ ದೇವಿಕೇರಿ ಮಾತನಾಡಿ, ವಿದ್ಯಾರ್ಥಿ ಸಮೂಹ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯವಂತರಾಗಿರಬೇಕು, ಗುರಿ ಇಟ್ಟುಕೊಂಡು ವಿದ್ಯಾಬ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕನ್ನಡಪ್ರಭ ವಾರ್ತೆ ಮುಳಬಾಗಿಲು

ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನಿಗೆ ದೈಹಿಕವಾಗಿ, ಮಾನಸಿಕವಾಗಿ ಉತ್ತಮ ಆರೊಗ್ಯ ಕುಂಠಿತವಾಗಲು ಪ್ರಮುಖ ಕಾರಣವಾಗುತ್ತದೆ, ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಆತಂಕದ ವಿಚಾರವಾಗಿದೆ ಎಂದು ಯುವ ಜನ ಮತ್ತು ಅಭಿವೃದ್ಧಿ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಜ್ಞಾನ ಸೆಲ್ವಿ ಕುಮಾರಿ ತಿಳಿಸಿದರು.

ತಾಲೂಕಿನ ದೇವರಾಯ ಸಮುದ್ರ ಐಟಿಐ ಸಂಸ್ಥೆಯಲ್ಲಿ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವತಿಯಿಂದ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಸಂಸ್ಥೆಯಿಂದ ವಿವಿಧ ರೀತಿಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಒಳ್ಳೆಯ ಆಭ್ಯಾಸಗಳನ್ನು ಇಟ್ಟುಕೊಂಡು ವ್ಯಾಸಂಗ ಮಾಡುವುದರ ಮೂಲಕ ಪ್ರತಿಭಾವಂತರಾಗಬೇಕು, ಯಾವುದೇ ಕಾರಣಕ್ಕೂ ಕೆಟ್ಟ ಚಟಗಳಿಗೆ ಬಲಿಯಾಗಬಾರದು ಎಂದು ತಿಳಿಸಿದರು.

ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ.ಗುಂಡಪ್ಪ ದೇವಿಕೇರಿ ಮಾತನಾಡಿ, ವಿದ್ಯಾರ್ಥಿ ಸಮೂಹ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯವಂತರಾಗಿರಬೇಕು, ಗುರಿ ಇಟ್ಟುಕೊಂಡು ವಿದ್ಯಾಬ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಡ್ರಗ್ಸ್ ಗೆ ಮಾರುಹೋಗುತ್ತಿರುವುದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದು, ಇದರಿಂದ ಭವಿಷ್ಯದಲ್ಲಿ ಜೀವ ಹಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.

ಪ್ರಾಂಶುಪಾಲ ಕೆ.ಆರ್.ಶ್ರೀನಿವಾಸ್, ಕಿರಿಯ ತರಬೇತಿ ಅಧಿಕಾರಿಗಳಾದ ಕೃಷ್ಣಪ್ಪ, ಸರಿತಾ, ಗೌತಮ್ಮ, ಕಾರ್ಯಕ್ರಮದ ಆಯೋಜಕಿಯರಾದ ಕೆ.ಅನುಷಾ, ಕೆ.ಕೆ.ವಿಮಲ, ವಿ.ಆರ್.ವಿಮಲ, ಎಂ.ಅಶ್ವಿನಿ ಇದ್ದರು.