ಯುವಜನರು ಸಮಾಜದ ಮುಖ್ಯವಾಹಿನಿಗೆ ಬಂದು ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಐಕ್ಯತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಇಂತಹ ಸಂಘಟನೆಗಳು ಸಹಕಾರಿಯಾಗಲಿವೆ.
ಗದಗ: ಜಿಲ್ಲೆಯಲ್ಲಿ ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಯು ಯುವ ಸಮುದಾಯದಲ್ಲಿ ರಾಷ್ಟ್ರೀಯ ಭಾವನೆ, ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಸೌಹಾರ್ದತೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಯಲ್ಲಿ ಯುವಜನತೆ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಸೋಮವಾರ ಜರುಗಿದ ಭಾರತ ಜೋಡೋ ಯುವ ಸಂಘಗಳ ಸ್ಥಾಪನೆ ಕುರಿತು ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಯುವಜನರು ಸಮಾಜದ ಮುಖ್ಯವಾಹಿನಿಗೆ ಬಂದು ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಐಕ್ಯತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಇಂತಹ ಸಂಘಟನೆಗಳು ಸಹಕಾರಿಯಾಗಲಿವೆ. ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕರು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಹೆಚ್ಚಿಸಲು ಈ ಸಂಘಗಳು ವೇದಿಕೆಯಾಗಲಿವೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗದಿತ ಕಾಲಮಿತಿಯೊಳಗೆ ಸಂಘಗಳ ರಚನೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರೆ ಸಂಬಂಧಿತ ಇಲಾಖೆಯ ಸಿಬ್ಬಂದಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿ ಯಶಸ್ವಿಗೊಳಿಸಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಈ ಸಂಘಗಳ ಪ್ರಯೋಜನ ಪಡೆಯುವಂತೆ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದರು.
ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಯುವ ಸಂಘಗಳನ್ನು ರಚಿಸುವ ಪ್ರಕ್ರಿಯೆ, ಸಂಘಗಳ ಕಾರ್ಯವೈಖರಿ ಮತ್ತು ಮುಂದಿನ ಚಟುವಟಿಕೆಗಳ ರೂಪುರೇಷೆಗಳ ಕುರಿತು ವಿಸ್ತೃತವಾಗಿ ಸಭೆಯಲ್ಲಿ ಚರ್ಚಿಸಲಾಯಿತು.ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಪಂ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಡಾ. ಎಚ್.ಎಸ್. ಜಿನಗ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.