ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಯುವಜನರ ಪ್ರತಿಭಟನಾ ಧರಣಿ ನಡೆಯುತ್ತಿದೆ

ಹೊಸಪೇಟೆ: ಧಾರವಾಡದಲ್ಲಿ ಉದ್ಯೋಗಕ್ಕಾಗಿ ಯುವಜನರು ನಡೆಸುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದ ನಾಯಕರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್‌ಓ ವಿಜಯನಗರ ಜಿಲ್ಲಾ ಸಂಚಾಲಕ ರವಿಕಿರಣ್ ಜೆಪಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಯುವಜನರ ಪ್ರತಿಭಟನಾ ಧರಣಿ ನಡೆಯುತ್ತಿದೆ. ಯುವಜನರ ನ್ಯಾಯಯುತ ಹೋರಾಟ ಹಾಗೂ ಪ್ರಜಾತಾಂತ್ರಿಕ ಹಕ್ಕಿನ ಮೇಲೆ ದಾಳಿ ಮಾಡಿರುವ ಪೊಲೀಸರು ಹೋರಾಟ ಸಮಿತಿಯ ನಾಯಕರು, ಎಐಡಿವೈಓ ಯುವಜನ ಸಂಘಟನೆ ಹಾಗೂ ಎಐಕೆಕೆಎಂಎಸ್ ರೈತ ಸಂಘಟನೆ ಸೇರಿದಂತೆ ಹೋರಾಟವನ್ನು ಬೆಂಬಲಿಸಲು ಬಂದಿದ್ದ ಜನಪರ ಸಂಘಟನೆಗಳ ನಾಯಕರನ್ನು ಬಂಧಿಸಿದ್ದಾರೆ. ಸರ್ಕಾರದ ಈ ದಮನಕಾರಿ ನಡೆಯನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರು ಕೇಳಿದ ಮಾಹಿತಿಯನ್ನು ಹಲವು ಬಾರಿ ನೀಡಿದ್ದಾಗಿಯೂ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಿಸಲಾಗಿದೆ. ಮತ್ತು ಇದೀಗ ಯುವಜನರ ನ್ಯಾಯಯುತ ಹೋರಾಟವನ್ನು ಬೆಂಬಲಿಸಲು ಬಂದ ನಾಯಕರುಗಳನ್ನು ಬಂಧಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸದಸ್ಯರಾದ ಯು. ಉಮಾದೇವಿ, ವಿದ್ಯಾರ್ಥಿಗಳಾದ ಕೆ.ಚಂದ್ರ, ಆಕಾಶ್, ಜ್ಞಾನೇಶ್‌ ಇನ್ನಿತರೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಹೊಸಪೇಟೆಯಲ್ಲಿ ಬುಧವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.