ಯುವ ನಿಧಿ: ನೋಂದಣಿ ಗುರಿ ಸಾಧಿಸಿ

| Published : Jan 05 2024, 01:45 AM IST

ಸಾರಾಂಶ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿಗೆ ಜಿಲ್ಲೆಯಲ್ಲಿ ಹೆಚ್ಚಿನ ನೋಂದಣಿ ಮಾಡಿಸಿ ಯೋಜನೆಯ ಸೌಲಭ್ಯ ಒದಗಿಸಲು ತಹಸೀಲ್ದಾರ್ ಮತ್ತು ತಾಪಂ ಇಒ ಮುಂದಾಗಬೇಕು.

ಕಾರವಾರ:

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿಗೆ ಜಿಲ್ಲೆಯಲ್ಲಿ ಹೆಚ್ಚಿನ ನೋಂದಣಿ ಮಾಡಿಸಿ ಯೋಜನೆಯ ಸೌಲಭ್ಯ ಒದಗಿಸಬೇಕು ಎಂದು ತಹಸೀಲ್ದಾರ್ ಮತ್ತು ತಾಪಂ ಇಒಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯುವನಿಧಿ ಯೋಜನೆಯ ನೋಂದಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ 2022-23ರಲ್ಲಿ ಪದವಿ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳು ಯೋಜನೆಗೆ ಅರ್ಹರಾಗಿದ್ದು, ಪದವೀಧರರಿಗೆ ₹ 3000 ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ₹ 1500 ನಿರುದ್ಯೋಗ ಭತ್ಯೆಯನ್ನು 2 ವರ್ಷ ವರೆಗೆ ನೀಡಲಾಗುತ್ತದೆ. ಈ ಕುರಿತು ಎಲ್ಲೆಡೆ ಅರಿವು ಮೂಡಿಸುವ ಜತೆಗೆ ಜಿಲ್ಲೆಯ ಗರಿಷ್ಠ ಸಂಖ್ಯೆಯ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.ಜಿಲ್ಲೆಯಲ್ಲಿ 32 ಪದವಿ ಹಾಗೂ 8 ಡಿಪ್ಲೊಮಾ ಕಾಲೇಜುಗಳಿದ್ದು 2022-23ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ವಿವರ ಮತ್ತು ಮೊಬೈಲ್ ಸಂಖ್ಯೆ ಸಂಗ್ರಹಿಸಿ ಅವರನ್ನು ಸಂಪರ್ಕಿಸಬೇಕು. ಯೋಜನೆ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡುವಂತೆ ಹಾಗೂ ಗ್ರಾಪಂ, ತಹಸೀಲ್ದಾರ್ ಕಚೇರಿ ವ್ಯಾಪ್ತಿಯಲ್ಲಿ ಯೋಜನೆ ಕುರಿತಂತೆ ಪ್ರಚಾರ ಫಲಕ ಅಳವಡಿಕೆ, ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಕೈಗೊಳ್ಳಬೇಕು ಎಂದು ಹೇಳಿದರು.ಜ. 12ರಂದು ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು ಅಂದು ರಾಜ್ಯದಲ್ಲಿ ನೋಂದಣಿಯಾದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ಜಿಲ್ಲೆಯಲ್ಲಿ ಈ ವರೆಗೆ 752 ಜನರು ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಉಳಿದವರಿಗೆ ಈ ಯೋಜನೆಯ ಪ್ರಯೋಜನ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.ಅಪರ ಜಿಲ್ಲಾಧಿಕಾರಿ ಪ್ರಕಾಶ ರಾಜಪೂತ, ಜಿಪಂ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ, ಜಿಲ್ಲಾ ಉದ್ಯೋಗಾಧಿಕಾರಿ ವಿನೋದ ನಾಯ್ಕ, ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಡಿ.ಟಿ. ನಾಯ್ಕ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಜಯಂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.