ಸಾರಾಂಶ
ಪದವಿ, ಡಿಪ್ಲೊಮಾ ಮುಗಿಸಿ ಆರು ತಿಂಗಳೊಳಗೆ ಕೆಲಸ ಸಿಗದೆ ಇದ್ದವರು ಈ ಯೋಜನೆ ಹೆಸರು ನೋಂದಾಯಿಸಿಕೊಳ್ಳಬಹುದು.
ಕಾರವಾರ:
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಮಂಗಳವಾರದಿಂದ ಪ್ರಾರಂಭವಾಗಿದ್ದು, ಅರ್ಹರು ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ಮುಖಾಂತರ ಸರ್ಕಾರದ ಮಹತ್ತರ ಯೋಜನೆ ಯುವನಿಧಿ ಯೋಜನೆ ಅನುಷ್ಠ್ಠಾನಗೊಳಿಸಲಾಗಿದೆ ಎಂದು ಹೇಳಿದರು.ಈ ಯೋಜನೆಯಡಿ ಪದವೀಧರರು, ಡಿಪ್ಲೊಮಾ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023 ತೇರ್ಗಡೆಯಾಗಿದ್ದು ಮತ್ತು ಫಲಿತಾಂಶ ಪ್ರಕಟಗೊಂಡ 180 ದಿನದೊಳಗೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದರು.ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ₹ 3.000 ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ₹ 1.500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಸಂದಾಯ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಟಿ. ನಾಯ್ಕ, ಜಿಲ್ಲಾ ಉದ್ಯೋಗಾಧಿಕಾರಿ ವಿನೋದ ನಾಯ್ಕ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಸಹಾಯಕ ನಿರ್ದೇಶಕ ರಜತ್ ಹಬ್ಬು ಇದ್ದರು.