ಸಾರಾಂಶ
ಕನ್ನಡಪ್ರಭ ವರ್ತೆ ಚಾಮರಾಜನಗರ
ಯುವಜನರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಮಂಗಳವಾರ ಚಾಲನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ‘ಯುವನಿಧಿ ನೋಂದಣಿ ಪ್ರಕ್ರಿಯೆ ಆರಂಭ’ ಕುರಿತ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ವಿದ್ಯಾಭ್ಯಾಸ ಮುಗಿಸಿರುವ ಪದವಿ ಹಾಗೂ ಸ್ನಾತಕೋತ್ತರ ಪದವಿಧರರು ಹಾಗೂ ಡಿಪ್ಲೊಮಾ ತೇರ್ಗಡೆಯಾದ ನಿರುದ್ಯೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಯಾಗಿರುವ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆ ಒಂದಾಗಿದೆ. ಯೋಜನೆಯ ಸದ್ಬಳಕೆ ಹಾಗೂ ಯಶಸ್ವಿಗೆ ನೋಂದಣಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜಿಲ್ಲೆಯ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜಿನ ಪ್ರಾಂಶುಪಾಲರು, ಮುಖ್ಯಸ್ಥರು ಸಹಕರಿಸಿ ನಿರುದ್ಯೋಗಿ ಅಭ್ಯರ್ಥಿಗಳನ್ನು ಪ್ರೇರೇಪಿಸಬೇಕು ಎಂದರು.2023 ಮತ್ತು 2024ರಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳವರೆಗೆ ಸರ್ಕಾರಿ ಆಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಹಾಗೂ ಕರ್ನಾಟಕದಲ್ಲಿ ವಾಸವಿದ್ದು, ಕನಿಷ್ಠ 6 ವರ್ಷಗಳವರೆಗೆ ಅಧ್ಯಯನ ಮಾಡಿರುವ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದು. ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಉತ್ತೀರ್ಣವಾಗಿರುವ ಬಗ್ಗೆ ಪ್ರಮಾಣಪತ್ರ ನೋಂದಣಿಗೆ ಅಗತ್ಯವಾಗಿರುವ ದಾಖಲಾತಿಗಳಾಗಿವೆ. ಅಲ್ಲದೆ ಪ್ರತಿ ಮಾಹೆ ದಿನಾಂಕ 1ರಿಂದ 25ರೊಳಗೆ ಮಾಸಿಕ ಸ್ವಯಂ ಘೋಷಣಾ ಪತ್ರ ನೀಡುವುದು ಕಡ್ಡಾಯವಾಗಿದೆ. ಯೋಜನೆಯ ನೋಂದಣಿ ಪ್ರಕ್ರಿಯೆಯಲ್ಲಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯ ವಿವರ ನೀಡಬೇಕು ಎಂದರು.ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ಮಾಹೆ 3 ಸಾವಿರ ರು. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ 1500 ರು.ಗಳನ್ನು ನಿರುದ್ಯೋಗ ಭತ್ಯೆಯಾಗಿ ನೋಂದಣಿಯಾಗುವ ಮುಂದಿನ 2 ವರ್ಷಗಳವರೆಗೆ ನೀಡಲಾಗುವುದು. ಅಭ್ಯರ್ಥಿಗಳು ನೋಂದಣಿಗೆ ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಬಹುದು. ಸಹಾಯವಾಣಿಗೆ 1800-599-7154 ಸಂಪರ್ಕಿಸಿ.
ಜಿಪಂ ಸಿಇಒ ಮೋನಾ ರೋತ್, ಎಡಿಸಿ ಗೀತಾ ಹುಡೇದ, ಜಿಪಂ ಉಪಕಾರ್ಯದರ್ಶಿ ಪಿ.ಲಕ್ಷ್ಮಿ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಅಧಿಕಾರಿ ಮಹಮ್ಮದ್ ಅಕ್ಬರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಂ.ವಿ.ಸುಧಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಕೌಶಲ್ಯಾಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಮಲ್ಲೇಶ್, ಆಪ್ತ ಸಮಾಲೋಚಕ ಹಾಗೂ ತರಬೇತುದಾರ ಮಹದೇವಸ್ವಾಮಿ, ಉದ್ಯೋಗಾಭಿವೃದ್ಧಿ ನಿರ್ವಾಹಕ ಮೋಯಿನ್ ಖಾನ್, ಇತರರು ಇದೇ ಸಂದರ್ಭದಲ್ಲಿ ಇದ್ದರು.