ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠ್ಠಲರಾವ್ ಅವರು ಸೋಮವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಔರಾದ್
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠ್ಠಲರಾವ್ ಅವರು ಸೋಮವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಔರಾದ್ ತಾಲೂಕಿನ ಬಾದಲಗಾಂವ ಗ್ರಾಮಕ್ಕೆ ಭೇಟಿ ನೀಡಿದ ಅವರು, ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿಯ ಪ್ರಗತಿ ಹಾಗೂ ಅನುಷ್ಠಾನದ ಕುರಿತು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಕಾಮಗಾರಿಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.
ನಂತರ ವನಮಾರಪಳ್ಳಿ ಗ್ರಾಮದ ಕಿತ್ತೂರುರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿದ ಸಿಇಒ, ವಿದ್ಯಾರ್ಥಿನಿಯರಿಗೆ ಕಲ್ಪಿಸಲಾಗಿರುವ ವಸತಿ, ಸ್ವಚ್ಛತೆ, ಕುಡಿಯುವ ನೀರು, ಆಹಾರ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದುಕೊಂಡು ವಿದ್ಯಾರ್ಥಿನಿಯರಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಿದರು.ಇದಲ್ಲದೇ ಔರಾದ್ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಸ್ವಚ್ಛತೆ, ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಸಿಬ್ಬಂದಿಯಿಂದ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ, ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಮಾಹಿತಿ ಪಡೆದ ಅವರು ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ದೊರೆಯುವಂತೆ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ಟಿಎಚ್ಒ ಅವರಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ತಾ.ಪಂ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಂತ್ರಿಕ ಸಹಾಯಕ ಶರಣಪ್ಪ, ಸಂದೀಪ ಕಳ್ಸೆ, ಪರಮೇಶ್ವರ್, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್ ಹಾಗೂ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.