ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಪಂ ಸಿಇಓ ಭೇಟಿ

| Published : Sep 22 2025, 01:02 AM IST

ಸಾರಾಂಶ

ಬೀಳಗಿ ತಾಲೂಕಿನ ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ, ಜಲಜೀವನ್ ಮಿಷನ್ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶುದ್ಧ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬೀಳಗಿ ತಾಲೂಕಿನ ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ, ಜಲಜೀವನ್ ಮಿಷನ್ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶುದ್ಧ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲಿಸಿದರು. ಘಟಕ ನಿರ್ಮಾಣದ ವಿನ್ಯಾಸ, ಬಳಸುತ್ತಿರುವ ಸಾಮಗ್ರಿಗಳ ಗುಣಮಟ್ಟ ಮತ್ತು ಕಾಮಗಾರಿಯ ವೇಗದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಗ್ರಾಮಸ್ಥರ ಬಳಕೆಗೆ ಲಭ್ಯವಾಗುವಂತೆ ಕ್ರಮಕೈಗೊಳ್ಳುವಂತೆ ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಪ್ರತಿ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಪೈಪ್ ಲೈನ್‌ ಅಳವಡಿಕೆ ಕಾಮಗಾರಿ ವೀಕ್ಷಣೆ ಮಾಡಿ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಂಡು ಗುಣಮಟ್ಟ ಕಾಯ್ದುಕೊಳ್ಳುವಂತೆ ತಾಕೀತು ಮಾಡಿದರು. ನಂತರ ಹೊನ್ನಿಹಾಳ ಗ್ರಾಮಕ್ಕೆ ಭೇಟಿ ನೀಡಿದ ಅವರು, ಅಲ್ಲಿ ನಡೆಯುತ್ತಿರುವ ಜಲಜೀವನ್ ವಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಕೆಲವು ಮನೆಗಳಿಗೆ ಭೇಟಿ ನೀಡಿ, ಕಾಮಗಾರಿಯ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿದರು. ಪ್ರತಿಯೊಂದು ಮನೆಗೂ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ತಲುಪಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಆಡಳಿತಾತ್ಮಕ ಕಾರ್ಯವೈಖರಿ ಪರಿಶೀಲಿಸಿದರು. ಸಿಬ್ಬಂದಿಯ ಹಾಜರಾತಿ, ಸಾರ್ವಜನಿಕರಿಗೆ ನೀಡುತ್ತಿರುವ ಸೇವೆಗಳು, ನೈರ್ಮಲ್ಯ ನಿರ್ವಹಣೆ ಹಾಗೂ ಸರ್ಕಾರದ ಇತರ ಯೋಜನೆಗಳ ಅನುಷ್ಠಾನದ ಕುರಿತು ದಾಖಲೆಗಳನ್ನು ಪರಿಶೀಲಿಸಿ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಭೇಟಿ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಪಾಟೀಲ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಆಕಾಶ್ ವಂದೆ ಸೇರಿದಂತೆ ಇತರರು ಇದ್ದರು.