ಸಾರಾಂಶ
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿರುವ ಬೃಹತ್ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಹಿರಿಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಈ ವೇಳೆ ಕಂದಾಯ ಇಲಾಖೆಯಿಂದ ಒಂದು ಲಕ್ಷ ಫಲಾನುಭವಿಗಳಿಗೆ ಪಟ್ಟಾ ಖಾತೆ ನೀಡಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮ ಯಶಸ್ಸಿಗೆ ಹಾಗೂ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು 64 ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ಜತೆಗೆ ಕಾರ್ಯಕ್ರಮದಲ್ಲಿ ಹಟ್ಟಿ, ಹಾಡಿ, ತಾಂಡಾ, ಪಾಳ್ಯ, ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅಲ್ಲಿ ವಾಸಿಸುತ್ತಿರುವ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು ನಿರ್ಧರಿಸಲಾಗಿದೆ.
ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಮುಂದೂಡಲು ಚಿಂತನೆ ನಡೆಸಲಾಗಿತ್ತು. ಆದರೆ ಇದೀಗ ಕದನ ವಿರಾಮ ಘೋಷಣೆಯಾಗಿ ಪರಿಸ್ಥಿತಿ ಶಾಂತವಾಗಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಈ ಹಿಂದೆ ನಿರ್ಧರಿಸಿದಂತೆ ಆಯೋಜಿಸಲು ನಿರ್ಧರಿಸಲಾಗಿದೆ.
ಉಸ್ತುವಾರಿಗಳ ನೇಮಕ:
ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಕ್ರಮ ಕೈಗೊಳ್ಳಲು ರಾಯಚೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಾಗಲಕೋಟೆ, ಹಾವೇರಿ, ವಿಜಯಪುರ ಜಿಲ್ಲೆಗಳ 64 ವಿಧಾನಸಭಾ ಕ್ಷೇತ್ರಗಳಿಗೆ ಸಚಿವರು, ಶಾಸಕರುಗಳನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. ಈ ಉಸ್ತುವಾರಿಗಳು ಮೇ 15ರೊಳಗೆ ತಮಗೆ ವಹಿಸಿರುವ ಕ್ಷೇತ್ರದಲ್ಲಿ ಅಧಿಕಾರಿಗಳು, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಬೇಕು ಹಾಗೂ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರುವುದಕ್ಕೆ ಸಂಬಂಧಿಸಿದ ಸಿದ್ಧತೆ ಮಾಡಬೇಕು ಎಂದು ಸೂಚಿಸಲಾಗಿದೆ.
ಕಾರ್ಯಕ್ರಮದ ಉಸ್ತುವಾರಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಸಾರಿಗೆ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನೀಡಲಾಗಿದೆ. ವಿಜಯನಗರ-ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಇನ್ನಿತರ ಕಾರ್ಯಗಳನ್ನು ನೋಡಿಕೊಳ್ಳುವಂತೆ ಸೂಚಿಸಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಳ್ಳುತ್ತಿರುವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹೊಸಪೇಟೆಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಪಟ್ಟಾ ಖಾತಾ ನೀಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ 64 ವಿಧಾನಸಭಾ ಕ್ಷೇತ್ರಗಳಿಗೆ ಸಚಿವರು, ಶಾಸಕರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. ಅವರುಗಳು ಅಧಿಕಾರಿಗಳು, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ಯಶಸ್ಸಿಗೆ ಕೆಲಸ ಮಾಡುವಂತೆ ಸೂಚಿಸಲಾಗಿದೆ.
ಡಿ.ಕೆ. ಶಿವಕುಮಾರ್,ಕೆಪಿಸಿಸಿ ಅಧ್ಯಕ್ಷ
ಕದನ ವಿರಾಮ ಹಿನ್ನೆಲೆಯಲ್ಲಿ
ಕಾರ್ಯಕ್ರಮ: ಸಿದ್ದರಾಮಯ್ಯ
ಭಾರತ- ಪಾಕಿಸ್ತಾನ ನಡುವೆ ಈಗ ಯುದ್ಧ ವಿರಾಮ ಘೋಷಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಎರಡು ವರ್ಷದ ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದೇವೆ. ನುಡಿದಂತೆ ನಡೆದ ಸರ್ಕಾರ ಇದ್ದರೆ ಅದು ನಮ್ಮದು ಮಾತ್ರ. ಇದೇ ನಮ್ಮ ಸರ್ಕಾರದ ಯಶಸ್ಸು.
-ಸಿದ್ದರಾಮಯ್ಯ, ಸಿಎಂ
ವರ್ಷದ ಹರ್ಷ
- ಕದನ ವಿರಾಮ: ನಿಗದಿಯಂತೆ ರ್‍ಯಾಲಿ ಆಯೋಜನೆ
- ಮೇ 20ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ವರ್ಷ
- ಹೊಸಪೇಟೆಯಲ್ಲಿ ಬೃಹತ್ ಸಂಭ್ರಮಾಚರಣೆ ನಡೆಸಲು ನಿರ್ಧರಿಸಿದ್ದ ಕಾಂಗ್ರೆಸ್
- ಭಾರತ- ಪಾಕ್ ಸಂಘರ್ಷ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿಕೆಗೆ ಚಿಂತನೆ
- ಈಗ ಕದನ ವಿರಾಮ ಏರ್ಪಟ್ಟ ಹಿನ್ನೆಲೆಯಲ್ಲಿ ಅದೇ ದಿನದಂದು ಕಾರ್ಯಕ್ರಮ
- 1 ಲಕ್ಷ ಜನರಿಗೆ ಪಟ್ಟಾ ವಿತರಿಸುವ ಕಾರ್ಯಕ್ರಮದಲ್ಲಿ ರಾಹುಲ್ ಭಾಗಿ ನಿರೀಕ್ಷೆ