ಸಾರಾಂಶ
ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ತಿಂಗಳ 25ಕ್ಕೆ ಮುಂದೂಡಿದೆ.
ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆಯನ್ನು ಇದೇ ತಿಂಗಳು 25ಕ್ಕೆ (ಬುಧವಾರ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೂಡಿದೆ.
ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದ್ದರಿಂದ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಸರ್ಕಾರಿ ಅಭಿಯೋಜಕರು, ಸಂತ್ರಸ್ತೆಗೆ ನೊಟೀಸ್ ಜಾರಿ ಮಾಡಬೇಕಿರುವ ಜತೆಗೆ ಆರೋಪಿಯ ಜಾಮೀನು ಅರ್ಜಿಯ ಕುರಿತು ಕೂಲಂಕಷವಾಗಿ ಗಮನಿಬೇಕಿದೆ.
ಇದಕ್ಕಾಗಿ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಬೇಕಿದೆ ಎಂದು ಮನವಿ ಮಾಡಿದರು. ಸರ್ಕಾರಿ ಅಭಿಯೋಜಕರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಇದೇ ತಿಂಗಳ 25ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.