ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಲು ಬಿಜೆಪಿ-ಜೆಡಿಎಸ್‌ ಪಕ್ಷಗಳೆರಡೂ ಸೇರಿ ಸದನದ ಒಳ ಮತ್ತು ಹೊರಗೆ ಜಂಟಿ ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.

ಬೆಂಗಳೂರು : ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಲು ಬಿಜೆಪಿ-ಜೆಡಿಎಸ್‌ ಪಕ್ಷಗಳೆರಡೂ ಸೇರಿ ಸದನದ ಒಳ ಮತ್ತು ಹೊರಗೆ ಜಂಟಿ ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.

ಸೋಮವಾರ ನಗರದಲ್ಲಿ ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಉಭಯ ನಾಯಕರು, ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗಾಗಿ ನಿಗದಿಪಡಿಸಿದ್ದ ಹಣ ಕಸಿದುಕೊಂಡ ಆರೋಪ ಎದುರಿಸುತ್ತಿರುವವರನ್ನು ಸಂಪುಟದಲ್ಲಿ ಮುಂದುವರಿಸುವುದು ಆ ಸಮುದಾಯಕ್ಕೆ ಎಸಗುವ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

187 ಕೋಟಿ ರು. ಲೂಟಿ ಆರೋಪ ಇದೆ:

ಅಶೋಕ್‌ ಅವರು ಮಾತನಾಡಿ, ನಾಗೇಂದ್ರ ಅವರ ಮೇಲೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟರಿಗೆ ಸೇರಿದ 187 ಕೋಟಿ ರು. ಲೂಟಿ ಮಾಡಿದ ಆರೋಪವಿದೆ. ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ್ದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ ಎಂದು ಆಪಾದಿಸಿದರು.

ನಾಗೇಂದ್ರ ಕಳಂಕಿತರಾಗಿದ್ದು, ಸಚಿವ ಸಂಪುಟದಲ್ಲಿ ಇರಲು ಯೋಗ್ಯತೆ ಇಲ್ಲ. ಕಳಂಕಿತರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿದರೆ ಅದರಿಂದ ಇಡೀ ಸಂಪುಟ ಕಳಂಕಿತವಾಗುತ್ತದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ಸದನದ ಒಳ ಹಾಗೂ ಹೊರಗೆ ಕೂಡ ಹೋರಾಟ ನಡೆಯಲಿದೆ. ಬಿಡದಿ ಟೌನ್‌ಶಿಪ್‌ ಯೋಜನೆ, ಸಚಿವ ನಾಗೇಂದ್ರ ಅವರ ಮೇಲಿನ ಆರೋಪ, ಕೆಪಿಎಸ್‌ಸಿ ಹಗರಣ ಮೊದಲಾದ ವಿಷಯಗಳ ವಿರುದ್ಧ ಜೆಡಿಎಸ್‌ ಜೊತೆಗೆ ಸೇರಿ ಒಂದಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ವಿಜಯೇಂದ್ರ ಅವರು ಮಾತನಾಡಿ, ಪರಿಶಿಷ್ಟ ಪಂಗಡದ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ನೂರಾರು ಕೋಟಿ ರು. ದುರುಪಯೋಗಕ್ಕೆ ಸಂಬಂಧಿಸಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮುನ್ನವೇ ಹಾಗೂ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿರುವ ಸಂದರ್ಭದಲ್ಲೇ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ಯಾವ ರೀತಿಯ ಒತ್ತಡವಿತ್ತು ಎಂಬುದನ್ನು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಬೇಕು

ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಹೈಕಮಾಂಡ್ ಮೇಲೆ ಯಾವ ರೀತಿಯ ಒತ್ತಡವಿತ್ತು ಎಂಬುದನ್ನು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಬೇಕು. ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಡ ಹೇರಿದ್ದರು ಎಂಬ ಮಾಹಿತಿ ಕಾಂಗ್ರೆಸ್ ವಲಯದಲ್ಲೇ ಚರ್ಚೆಯಾಗುತ್ತಿದೆ. ತಮ್ಮನ್ನು ಸಂಪುಟಕ್ಕೆ ಸೇರಿಸದಿದ್ದರೆ ಹಲವು ಸತ್ಯಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಾಗಿ ಅವರು ಬೆದರಿಕೆ ಹಾಕಿದ್ದರು ಎಂಬ ಮಾಹಿತಿಯೂ ಇದೆ ಎಂದು ವಿಜಯೇಂದ್ರ ಆರೋಪಿಸಿದರು.

ಇಂಥ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಯಾವುದೇ ರೀತಿಯ ಕ್ಲೀನ್‌ಚಿಟ್ ಸಿಗುವ ಮುನ್ನವೇ ಆತುರಾತುರವಾಗಿ ಸಚಿವ ಸಂಪುಟಕ್ಕೆ ಸೇರಿಸಿರುವುದು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡಿರುವ ಅಪಚಾರ. ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಸಂಪುಟದಲ್ಲಿ ಮುಂದುವರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಆ ಸಮುದಾಯಕ್ಕೆ ಅನ್ಯಾಯ ಮಾಡಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು ಒತ್ತಾಯಿಸಿದರು.

ಈ ವಿಚಾರವನ್ನು ಸದನದ ಒಳಗೂ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು. ಸದನದ ಹೊರಗಡೆಯೂ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ. ಪರಿಶಿಷ್ಟ ಪಂಗಡದ ಜನರ ಹಕ್ಕು ಮತ್ತು ಅವರ ಅಭಿವೃದ್ಧಿಗೆ ಮೀಸಲಾದ ಹಣದ ರಕ್ಷಣೆಗೆ ಬಿಜೆಪಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿದರು.