ಸಾರಾಂಶ
ಬಳ್ಳಾರಿ : ಕೋರ್ ಕಮಿಟಿ ಸಭೆಯಲ್ಲಿನ ಆರೋಪ ಮತ್ತು ಶಾಸಕ ಜನಾರ್ದನ ರೆಡ್ಡಿ ಜತೆ ಮುನಿಸಿಕೊಂಡು ಕ್ರುದ್ಧರಾಗಿರುವ ಮಾಜಿ ಸಚಿವ ಬಿ. ಶ್ರೀರಾಮುಲುಗೆ ದಿಢೀರ್ ಬೆಳವಣಿಗೆಯೊಂದರಲ್ಲಿ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹಾಗಾಗಿ ಸೋಮವಾರ ರಾತ್ರಿಯೇ ಶ್ರೀರಾಮುಲು ಬಳ್ಳಾರಿಯಿಂದ ಬೆಂಗಳೂರಿಗೆ ತೆರಳಿ ನಂತರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಂಗಳೂರಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಸಭೆಯಲ್ಲಿ ಸಂಡೂರು ಉಪ ಚುನಾವಣೆ ಸೋಲಿಗೆ ಕಾರಣರೆಂದು ನೇರ ಬೊಟ್ಟು ಮಾಡಿದ ಹಿನ್ನೆಲೆಯಲ್ಲಿ ಶ್ರೀರಾಮುಲು ಅವರು ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್ ವಿರುದ್ಧ ತೀವ್ರ ಕೋಪ ಹೊರ ಹಾಕಿದ್ದರು. ಸಭೆಯಿಂದ ಹೊರ ನಡೆದಿದ್ದಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷರ ವಿರುದ್ಧವೂ ಅಸಮಾಧಾನ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ನಡುವೆ ಅಸಮಾಧಾನ ಸ್ಫೋಟಗೊಂಡಿತ್ತು. ಏತನ್ಮಧ್ಯೆ ಶ್ರೀರಾಮುಲು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ದೂರವಾಣಿಯಲ್ಲಿ ಸಂಪರ್ಕಿಸಿ ಮಾತನಾಡಿದ್ದಲ್ಲದೆ, ದೆಹಲಿಗೆ ಬರುವಂತೆ ಸೂಚನೆ ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವರೇ ಶ್ರೀರಾಮುಲುಗೆ ದೆಹಲಿಗೆ ಬರುವಂತೆ ತಿಳಿಸಿದ್ದು ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿ ಅಲ್ಲಿಂದ ವಿಮಾನ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
ಕೋರ್ ಕಮಿಟಿ ಸಭೆಯಲ್ಲಾದ ಬೆಳವಣಿಗೆ, ಸಂಡೂರು ಉಪ ಚುನಾವಣೆಯಲ್ಲಿ ತಾನು ವಹಿಸಿದ ಪಾತ್ರ, ಸದ್ಯ ಜಿಲ್ಲೆಯ ರಾಜಕೀಯ ಚಿತ್ರಣ ಕುರಿತು ಅಮಿತ್ ಶಾ ಅವರಿಗೆ ವಿವರಿಸಲಿದ್ದಾರೆ. ಇದೇ ವೇಳೆ ಪಕ್ಷ ಸಂಘಟನೆ ಕುರಿತಂತೆಯೂ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.