ಬಂಧನದ ಭೀತಿ: ಭವಾನಿ ಜಾಮೀನಿಗಾಗಿ ಕೋರ್ಟಿಗೆ

| Published : May 28 2024, 01:02 AM IST / Updated: May 28 2024, 04:32 AM IST

bhavani revanna

ಸಾರಾಂಶ

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಹಾಗೂ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ 

 ಬೆಂಗಳೂರು :  ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಹಾಗೂ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದೆ. ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮಂಗಳವಾರಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಮತ್ತು ಸತೀಶ್‌ ಬಾಬು ಆರೋಪಿಗಳಾಗಿದ್ದಾರೆ. ರೇವಣ್ಣ ಜಾಮೀನು ಪಡೆದುಕೊಂಡರೆ, ಸತೀಶ್‌ ಬಾಬು ಇನ್ನೂ ಬಂಧನದಲ್ಲಿದ್ದಾರೆ. ಸತೀಶ್‌ ಬಾಬು ತಮ್ಮ ವಿಚಾರಣೆ ವೇಳೆ ಭವಾನಿ ರೇವಣ್ಣ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗಿದೆ. 

ಅಲ್ಲದೇ, ಆತನ ಮೊಬೈಲ್ ವಶಕ್ಕೆ ಪಡೆದು ಕಾಲ್ ಡೀಟೆಲ್ಸ್ ಪರಿಶೀಲನೆ ನಡೆಸಿದಾಗ ಕೆಲವೊಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿಗಾಗಿ ಭವಾನಿ ರೇವಣ್ಣ ಅವರನ್ನು ವಿಚಾರಣೆಗೊಳಪಡಿಸಲು ನೋಟಿಸ್‌ ನೀಡಲಾಗಿದೆ. ವಿಚಾರಣೆ ವೇಳೆ ಬಂಧಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.