ಸಾರಾಂಶ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳಿರುವಂತೆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ.
ವಯನಾಡ್ (ಕೇರಳ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳಿರುವಂತೆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ. ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಕೆ ಸುಧಾಕರನ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರನ್, ‘ರಾಹುಲ್ ಗಾಂಧಿ ನನ್ನಂತಹ ನಾಯಕರ ಸಂಪರ್ಕಕ್ಕೇ ಸಿಗುತ್ತಿರಲಿಲ್ಲ. ಇನ್ನು ಅವರನ್ನು ಸಾಮಾನ್ಯ ಜನರು ಸಂಪರ್ಕಿಸಲು ಹೇಗೆ ಸಾಧ್ಯ? ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಗೆಲುವಿಗೆ ಶ್ರಮಿಸುತ್ತೇನೆ’ ಎಂದರು.
ವಯನಾಡ್ ಲೋಕಸಭಾ ಕ್ಷೇತ್ರದ ಚುನಾವಣೆ ಏ.26ರಂದು ನಡೆಯಲಿದ್ದು, ಕಾಂಗ್ರೆಸ್‌ನಿಂದ ಹಾಲಿ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ರಾಜ್ಯಾಧ್ಯಕ್ಷ ಸುರೇಂದ್ರನ್ ಸ್ಪರ್ಧಿಸಿದ್ದಾರೆ. ಸಿಪಿಎಂನಿಂದ ನಾಯಕ ರಾಜಾ ಅವರ ಪತ್ನಿ ಆ್ಯನಿ ರಾಜಾ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಕ್ಷೇತ್ರದಲ್ಲಿ ಕಳೆದ ಬಾರಿ ರಾಹುಲ್ ಗಾಂಧಿ 4.31 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು.