ಸಾರಾಂಶ
ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡ ಆಗ್ರಹಿಸಿದರು.ಅನಂತಕುಮಾರ ಹೆಗಡೆ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೈಕ್ ಜಾಥಾದ ನೇತೃತ್ವ ವಹಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ। ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಎಂಬ ಪವಿತ್ರ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಹೀಗಿರುವಾಗ, ‘ನಾವು ಬಹುಮತ ಪಡೆದು ಕೇಂದ್ರದಲ್ಲಿ ಪುನಃ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆ’ ಎಂದು ಆನಂತಕುಮಾರ ಹೆಗಡೆ ಹೇಳಿಕೆ ನೀಡಿದ್ದಾರೆ.ಅವರ ಹೇಳಿಕೆಯು ಬಿಜೆಪಿ ಅಜೆಂಡಾ ಆಗಿದ್ದು ಇವರ ಬಾಯಲ್ಲಿ ಹೇಳಿಸುತ್ತಿದ್ದಾರೆ. ಸಂವಿಧಾನ ಬದಲಾಯಿಸುತ್ತೇವೆ ಎಂದು ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿಯವರು ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.ದೇಶದ 140 ಕೋಟಿ ಜನರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಬಿಜೆಪಿಯು ಇವರ ವಿರುದ್ದ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಪಕ್ಷದ ಬೆಂಬಲವಿರುವುದು ಸ್ಪಷ್ಟವಾಗುತ್ತದೆ. 10 ವರ್ಷದಲ್ಲಿ ಕೇಂದ್ರದ ಬಿಜೆಪಿ ಸಾಧನೆ ಶೂನ್ಯವಾಗಿದೆ. ಅದ್ದರಿಂದ ದೇಶದಲ್ಲಿ ಕೋಮುಗಲಭೆ ಸೃಷ್ಟಿಸಿ, ಲೋಕಸಭಾ ಚುನಾವಣೆಯಲ್ಲಿ ಜನರ ದಿಕ್ಕು ತಪ್ಪಿಸಲು ಮಾಡುತ್ತಿರುವ ಷಡ್ಯಂತ್ರ ಇದಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಗೆ ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.