ಆರ್‌ಎಸ್‌ಎಸ್ ಮಧ್ಯಸ್ಥಿಕೆ ಸಭೆಯ ನಂತರವೂ ಬಿಜೆಪಿಯಲ್ಲಿ ಭಿನ್ನಮತ : ರಾಜ್ಯಪಾಲರಿಗೆ ಅತೃಪ್ತರ ದೂರು

| Published : Sep 14 2024, 01:49 AM IST / Updated: Sep 14 2024, 04:35 AM IST

ಸಾರಾಂಶ

ಆರ್‌ಎಸ್‌ಎಸ್ ಮಧ್ಯಸ್ಥಿಕೆ ಸಭೆಯ ನಂತರವೂ ಬಿಜೆಪಿಯಲ್ಲಿ ಭಿನ್ನಮತ ಮುಂದುವರೆದಿದ್ದು, ಅತೃಪ್ತ ನಾಯಕರು ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆ ರದ್ದುಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

 ಬೆಂಗಳೂರು : ಬಿಜೆಪಿ ಮುಖಂಡರೆಲ್ಲರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಿ ಹೋಗಬೇಕು ಎಂದು ಆರ್‌ಎಸ್ಎಸ್‌ ಮುಖಂಡರು ತಾಕೀತು ಮಾಡಿದ ಮರುದಿನವೇ ಪಕ್ಷದ ಅತೃಪ್ತ ನಾಯಕರೆಲ್ಲರೂ ಸೇರಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಈ ಮೂಲಕ ಆರ್‌ಎಸ್‌ಎಸ್‌ ನಡೆಸಿದ ಸಭೆ ಬಳಿಕವೂ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ನಿಚ್ಚಳವಾದಂತಾಗಿದೆ.

ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಜಿ.ಎಂ. ಸಿದ್ದೇಶ್ವರ್‌, ಅಣ್ಣಾಸಾಹೇಬ ಜೊಲ್ಲೆ, ಕುಮಾರ್ ಬಂಗಾರಪ್ಪ, ಬಿ.ಪಿ.ಹರೀಶ್‌ ಮತ್ತಿತರರು ಶುಕ್ರವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿಯ ಜತೆಗೆ ರಾಯಚೂರು ಲೋಕಸಭಾ ಕ್ಷೇತ್ರಕ್ಕೂ ಬಳಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಮತ್ತು ರಾಯಚೂರು ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡುವಂತೆ ಕೋರಲಾಗಿದೆ ಎಂದು ಹೇಳಿದರು.

ಮುಖ್ಯಚುನಾವಣಾಧಿಕಾರಿ ಕಚೇರಿಗೂ ಈ ಬಗ್ಗೆ ದೂರು ನೀಡಲಾಗಿದ್ದು, ನ್ಯಾಯಾಲಯದಲ್ಲಿಯೂ ಪ್ರಶ್ನಿಸುವ ಬಗ್ಗೆ ಚಿಂತಿಸಲಾಗಿದೆ. ಅಲ್ಲದೇ, ಹಗರಣ ವಿರೋಧಿಸಿ ಪಾದಯಾತ್ರೆ ನಡೆಸುವ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡಲಿದೆ. ಪಕ್ಷದ ಮೂಲಕವೇ ಪಾದಯಾತ್ರೆ ನಡೆಸಲಾಗುತ್ತದೆ ಎಂದರು.