ಸಾರಾಂಶ
ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್ ಹೊಂದಿದೆ.
ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್ ಹೊಂದಿದೆ.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಮೇಲ್ಮನೆ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇದು ಹುಸಿಯಾಗಿದ್ದು, ಮೈತ್ರಿ ಮುಂದುವರಿಸಲು ಉಭಯ ಪಕ್ಷಗಳು ಒಲವು ಹೊಂದಿವೆ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯುವುದರಿಂದ ಸೀಟು ಹಂಚಿಕೆ ವಿಚಾರವಾಗಿ ಶೀಘ್ರದಲ್ಲಿಯೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಒಮ್ಮತ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.
ಚುನಾವಣೆ ನಡೆಯುವ ಆರು ಸ್ಥಾನಗಳ ಪೈಕಿ ಹಾಲಿ ಹೊಂದಿರುವ ಎರಡು ಸ್ಥಾನಗಳನ್ನು ನೀಡುವಂತೆ ಬಿಜೆಪಿಯ ಮುಂದೆ ಜೆಡಿಎಸ್ ಪ್ರಸ್ತಾಪವಿಡಲು ಮುಂದಾಗಿದೆ. ಇನ್ನುಳಿದ ನಾಲ್ಕು ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟು, ಆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ದಳಪತಿಗಳು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜೂ.3ರಂದು ಮತದಾನ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಇದೇ ತಿಂಗಳು 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಹೀಗಾಗಿ ಅಷ್ಟರೊಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಉಭಯ ಪಕ್ಷಗಳ ಮುಖಂಡರು ಕಾರ್ಯೋನ್ಮುಖರಾಗಿದ್ದಾರೆ.
ಪ್ರಸ್ತುತ ನೈಋತ್ಯ ಕ್ಷೇತ್ರದಿಂದ ಎಸ್.ಎಲ್.ಭೋಜೇಗೌಡ ಆಯ್ಕೆಯಾಗಿದ್ದು, ಈ ಬಾರಿಯೂ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಆಯ್ಕೆಯಾಗಿದ್ದರು. ಆದರೆ, ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದರಿಂದ ಆ ಸ್ಥಾನಕ್ಕೆ ಜೆಡಿಎಸ್ ಮುಖಂಡ ಶ್ರೀಕಂಠೇಗೌಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಟಿಕೆಟ್ ಲಭಿಸುವ ಸಾಧ್ಯತೆಯೂ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಇನ್ನುಳಿದಂತೆ ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ ಬಿಜೆಪಿ ಬಿಟ್ಟುಕೊಡುವ ಬಗ್ಗೆ ಜೆಡಿಎಸ್ ಚಿಂತನೆ ನಡೆಸಿದೆ. ಬುಧವಾರ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿಯೂ ಈ ಕುರಿತು ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.