ಸಂವಿಧಾನದ ಬಗ್ಗೆ ಬಿಜೆಪಿ ನಾಯಕರಿಗೆ ಗೌರವವಿಲ್ಲ: ಕನಿರಾಂ ರಾಠೋಡ್

| Published : Jan 08 2024, 01:45 AM IST / Updated: Jan 08 2024, 12:03 PM IST

ಸಂವಿಧಾನದ ಬಗ್ಗೆ ಬಿಜೆಪಿ ನಾಯಕರಿಗೆ ಗೌರವವಿಲ್ಲ: ಕನಿರಾಂ ರಾಠೋಡ್
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ನಾಯಕರು ಬಡವರು, ಶ್ರೀಮಂತರು ಎಂದು ವಿಭಜಿಸಿ ದೇವರು, ಧರ್ಮದ ಹೆಸರಿನಲ್ಲಿ ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಕನಿರಾಂ ರಾಠೋಡ್ ದೂರಿದರು.

ಕನ್ನಡಪ್ರಭ ವಾರ್ತೆ ಮಂಡ್ಯ 

ಬಿಜೆಪಿ ನಾಯಕರು ಬಡವರು, ಶ್ರೀಮಂತರು ಎಂದು ವಿಭಜಿಸಿ ದೇವರು, ಧರ್ಮದ ಹೆಸರಿನಲ್ಲಿ ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಕನಿರಾಂ ರಾಠೋಡ್ ದೂರಿದರು.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡವರು ಮತ್ತು ಶ್ರೀಸಾಮಾನ್ಯ ಕುಟುಂಬಕ್ಕೆ ಅನುಕೂಲವಾಗಿದೆ. ಆದರೆ, ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಡಾ.ಬಿ.ಆರ್.ಅಂಬೇಡ್ಕರ್ ಬರೆದಿರುವ ಸಂವಿಧಾನದ ಬಗ್ಗೆ ಗೌರವವಿಲ್ಲ. ಅವರಿಗೆ ಮನುವಾದಿ ಬೇಕಾಗಿದೆ. ಇದನ್ನು ಮತ್ತೆ ದೇಶದಲ್ಲಿ ಜಾರಿಗೆ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಸರ್ವಧರ್ಮವೂ ಒಂದೇ. ಬಡವರ ಪರ ಕೆಲಸ ಮಾಡುತ್ತೇವೆ. ದೇಶಕ್ಕಾಗಿ ಕಾಂಗ್ರೆಸ್‌ನ ಹಲವು ನಾಯಕರು ಪ್ರಾಣ ತೆತ್ತಿದ್ದಾರೆ. ಬಿಜೆಪಿಯ ಯಾವೊಬ್ಬ ನಾಯಕರೂ ಪ್ರಾಣ ತ್ಯಾಗ ಮಾಡಿಲ್ಲ. ದೇಶಕ್ಕೆ ಬಿಜೆಪಿಯ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲಲು ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು.

ಸಫಾಯಿ ಕರ್ಮಚಾರಿಗಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಸಾಲಪ್ಪ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು 100 ದೇವಸ್ಥಾನಗಳಿಗಿಂತ ಒಂದು ಶಾಲೆಯನ್ನು ತೆರೆಯಿರಿ. ಅದರಿಂದ ಜ್ಞಾನ ಲಭಿಸುತ್ತಿದೆ ಎಂದು ಹೇಳಿದ್ದರು. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ನಾಯಕರು ಶಾಲೆಗಳಿಗಿಂತ ದೇವಸ್ಥಾನಗಳಿಗೆ ಹೆಚ್ಚು ಒತ್ತು ಕೊಟ್ಟು, ಜನರಿಗೆ ದೇವರು,ಧರ್ಮದ ಹೆಸರಿನಲ್ಲಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಬಡವರ ಪರವಾಗಿವೆ. ಇದನ್ನು ಬಿಜೆಪಿ ನಾಯಕರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಸಮಾಜಘಾತಕರು, ಕ್ರಿಮಿನಲ್ ವ್ಯಕ್ತಿಗಳಿಗೆ ಬಿಜೆಪಿ ನಾಯಕರು ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಸುದ್ಧಿಗೋಷ್ಠಿಯಲ್ಲಿ ಮುಖಂಡರಾದ ರಾ.ಸ. ಕಾಳಯ್ಯ, ರಾಖೇಶ್, ಚಂದ್ರು, ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ ಇತರರು ಇದ್ದರು.