ಸಾರಾಂಶ
ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿನ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿನ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಅಲ್ಲದೆ, ಬಿಜೆಪಿ ನಾಯಕರು ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದ್ದಾರೆ.
ಕೆರಗೋಡು ಘಟನೆ ಬಗ್ಗೆ ಚಿತ್ರದುರ್ಗದಿಂದಲೇ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿಗಳಿಂದ ವರದಿ ಪಡೆದ ಅವರು ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಮಂಡ್ಯ ತಾಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್‌ನವರು ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ ಎಂದು ಮುಚ್ಚಳಿಕೆ ಪತ್ರ ಕೊಟ್ಟು ಅನುಮತಿ ಪಡೆದಿದ್ದರು.
ಆದರೆ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ.
ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿ ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೂರ್ವ ನಿಯೋಜಿತ ಕೃತ್ಯ:
ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು. ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ. ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕಾನೂನು ಪ್ರಕಾರ ಕ್ರಮಕ್ಕೆ ಸಿಎಂ ಸೂಚನೆ
ಘಟನೆ ಬಗ್ಗೆ ವಿವರಣೆ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ, ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.
;Resize=(128,128))
;Resize=(128,128))
;Resize=(128,128))
;Resize=(128,128))