‘ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಬಿಜೆಪಿ ತಮ್ಮ ಅನುಕೂಲಕ್ಕೆ ತಕ್ಕಂತೆ ಪುನರ್ ವಿಂಗಡಣೆ ಮಾಡಿಕೊಂಡು ರಾಜಕೀಯ ಮಾಡುತ್ತಿದೆ. ಇದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ನಮ್ಮ ರಾಜ್ಯದ ಹಿತರಕ್ಷಣೆ ಹಾಗೂ ಸಾರ್ವಭೌಮತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತೇವೆ.
ಬೆಂಗಳೂರು: ‘ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಬಿಜೆಪಿ ತಮ್ಮ ಅನುಕೂಲಕ್ಕೆ ತಕ್ಕಂತೆ ಪುನರ್ ವಿಂಗಡಣೆ ಮಾಡಿಕೊಂಡು ರಾಜಕೀಯ ಮಾಡುತ್ತಿದೆ. ಇದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ನಮ್ಮ ರಾಜ್ಯದ ಹಿತರಕ್ಷಣೆ ಹಾಗೂ ಸಾರ್ವಭೌಮತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತೇವೆ. ಕ್ಷೇತ್ರ ಪುನರ್ವಿಂಗಡಣೆಗೆ ನಮ್ಮ ವಿರೋಧವಿದೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಿಜೆಪಿ ಹಾಗೂ ಎನ್ಡಿಎ ಕೂಟದವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡಿಕೊಳ್ಳುತ್ತಿದ್ದಾರೆ. ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ. ಆದರೆ ಅವೈಜ್ಞಾನಿಕ ಹಾಗೂ ರಾಜಕೀಯ ಕಾರಣಕ್ಕಾಗಿ ಮಾಡುವ ಕ್ಷೇತ್ರ ಪುನರ್ ವಿಂಗಡಣೆಗೆ ನಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದರು.
ಕ್ಷೇತ್ರ ಪುನರ್ ವಿಂಗಡಣೆಯಂಥ ಪ್ರಮುಖ ವಿಚಾರ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡುವ ನಿರೀಕ್ಷೆ ಇತ್ತು. ಆದರೆ, ಏಕಾಏಕಿ ಸಚಿವ ಸಂಪುಟ ನಿರ್ಧಾರ ಮಾಡಿದೆ. ಇದರಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ಈ ರಾಜ್ಯಗಳು ಅಲ್ಪಸಂಖ್ಯಾತರಾಗಲಿವೆ. ಹೀಗಾಗಿ ನಮ್ಮ ರಾಜ್ಯಗಳ ಹಿತಾಸಕ್ತಿಗಾಗಿ ನಾವು ಧ್ವನಿ ಎತ್ತುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕೇರಳ, ತೆಲಂಗಾಣ ಸಿಎಂ ಜತೆ ಚರ್ಚೆ:
ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಸೂದೆ ಕುರಿತು ಭಾನುವಾರ ಕೇರಳ, ತೆಲಂಗಾಣ ಮುಖ್ಯಮಂತ್ರಿಗಳು ಸೇರಿ ಚರ್ಚೆ ಮಾಡಲಿದ್ದೇವೆ. ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡುತ್ತೇವೆ. ಉತ್ತರ ಭಾರತದ ರಾಜ್ಯಗಳಲ್ಲಿ ಎಷ್ಟು ಸ್ಥಾನಗಳು ಹೆಚ್ಚಾಗಲಿವೆ. ದಕ್ಷಿಣ ಭಾರತದ ರಾಜ್ಯಗಳ ಪರಿಸ್ಥಿತಿ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಮುಖ್ಯಮಂತ್ರಿ ತಿಳಿಸಿದರು.
ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ:
ಶುಕ್ರವಾರವಷ್ಟೇ ಕೇಂದ್ರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದು, ಮಾಧ್ಯಮಗಳ ವರದಿಯ ಮಾಹಿತಿ ಮಾತ್ರ ನಮಗೆ ತಿಳಿದಿದೆ. ಈ ಹಿಂದೆ ಡಿಎಂಕೆ ಕರೆದ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ಎನ್ಡಿಎ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಅವರು ರಾಜಕಾರಣ ಮಾಡಲಿ. ನಮ್ಮ ರಾಜ್ಯಗಳ ಹಿತಾಸಕ್ತಿಗಾಗಿ ನಾವು ಧ್ವನಿ ಎತ್ತುತ್ತೇವೆ. ದೇಶದ ಪ್ರಗತಿಗೆ ದಕ್ಷಿಣ ರಾಜ್ಯಗಳು ಶಕ್ತಿ ತುಂಬುತ್ತಿವೆ. ಅವರು ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದರು.
ಕನ್ನಡಿಗರ ಹಿತ ಗಮನದಲ್ಲಿಟ್ಟುಕೊಂಡು ಈ ಮಸೂದೆಗೆ ಬೆಂಬಲ ನೀಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರ ಕಾಲದಲ್ಲಿ ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ಅವರು ಹೇಳಲಿ. ಖಾಲಿ ಮಾತು ಆಡುವುದಲ್ಲ ಎಂದು ತಿರುಗೇಟು ನೀಡಿದರು.

