ಸಾರಾಂಶ
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಬಿರುಸಿನ ಚಟುವಟಿಕೆ ನಡೆಯುತ್ತಿರುವ ಮಧ್ಯೆಯೇ ರಾಜ್ಯ ಉಸ್ತುವಾರಿ ಬದಲಿಸುವ ಬಗ್ಗೆಯೂ ಪ್ರಸ್ತಾಪವಾಗಿದೆ.
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಬಿರುಸಿನ ಚಟುವಟಿಕೆ ನಡೆಯುತ್ತಿರುವ ಮಧ್ಯೆಯೇ ರಾಜ್ಯ ಉಸ್ತುವಾರಿ ಬದಲಿಸುವ ಬಗ್ಗೆಯೂ ಪ್ರಸ್ತಾಪವಾಗಿದೆ.
ಪಕ್ಷದ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್ ಅವರನ್ನು ಬದಲಿಸುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು ವರಿಷ್ಠರಿಗೆ ಮನವಿ ಮಾಡಿದ್ದಾರೆ. ಹೀಗಾಗಿ, ಈ ಬಗ್ಗೆ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ರಾಷ್ಟ್ರೀಯ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಬೇಕಿರುವುದರಿಂದ ಅದಾದ ಬಳಿಕ ಎಲ್ಲ ರಾಜ್ಯಗಳ ಉಸ್ತುವಾರಿಗಳ ಬದಲಾವಣೆ ಕೈಗೊಳ್ಳುವುದು ಸಾಮಾನ್ಯ. ಹೀಗಾಗಿ, ಆ ಸಂದರ್ಭದಲ್ಲಿ ಕರ್ನಾಟಕದ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರನ್ನೂ ಬದಲಿಸಬಹುದು ಎಂದು ಎಂಬ ಮಾತೂ ಕೇಳಿಬರುತ್ತಿದೆ.
ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಪಕ್ಷದಲ್ಲಿನ ಬಿಕ್ಕಟ್ಟು ಬಗೆಹರಿಸಲು ಯಾವುದೇ ಪ್ರಯತ್ನ ನಡೆಸಿಲ್ಲ. ಕೇವಲ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮಾತುಗಳನ್ನು ಮಾತ್ರ ಕೇಳುತ್ತಾರೆ. ಇತರ ಹಿರಿಯ ನಾಯಕರ ಅಭಿಪ್ರಾಯಗಳನ್ನು ಪರಿಗಣಿಸುವುದಿಲ್ಲ. ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಯತ್ನಾಳ್ ಬಣದ ಮುಖಂಡರು ದೆಹಲಿಗೆ ತೆರಳಿದ ವೇಳೆ ದೂರಿದ್ದರು ಎನ್ನಲಾಗಿದೆ.