ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಎಲ್ಲಾ ರೈತಪರ ಯೊಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಟೀಕಿಸಿದ್ದಾರೆ.
ಮಂಗಳವಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಹಸುವಿನ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಿಧಾನಸೌಧದಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಪ್ರತಿಭಟನೆ ವೇಳೆ ಮಾತನಾಡಿದ ಎ.ಎಸ್.ಪಾಟೀಲ್ ನಡಹಳ್ಳಿ, ರೈತರಿಗೆ ನಾನಾ ರೂಪದಲ್ಲಿ ಕನಿಷ್ಠ ಐದು ಸಾವಿರ ರುಪಾಯಿ ನೆರವು ನೀಡಲಾಗುತ್ತಿತ್ತು. ಹಾಲು ಉತ್ಪಾದಕರಿಗೂ ಪ್ರೋತ್ಸಾಹಧನವನ್ನು ನೀಡಲಾಗುತ್ತಿತ್ತು. ಹಾಲಿನ ಪ್ರೋತ್ಸಾಹಧನ, ವಿದ್ಯಾಸಿರಿ ಶಿಷ್ಯವೇತನ ಸೇರಿ ಎಲ್ಲ ರೈತಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ 36 ಲಕ್ಷಕ್ಕೂ ಹೆಚ್ಚು ರೈತ ಮಹಿಳೆಯರು ಹೈನುಗಾರಿಕೆ ಮಾಡುತ್ತಿದ್ದು, ಅವರಿಗೂ ಪ್ರೋತ್ಸಾಹ ಧನ ಸಿಗುತ್ತಿಲ್ಲ. ಕಾಂಗ್ರೆಸ್ ಸರ್ಕಾರವು ಪ್ರತಿಯೊಂದರಲ್ಲಿಯೂ ರಾಜಕಾರಣ ಮಾಡುತ್ತಿದೆ. ಹಾಲು ಉತ್ಪಾದಕರು ರಾಜ್ಯದ ಜನತೆಗೆ ಹಾಲು ನೀಡುವ ಕೆಲಸ ಮಾಡಿದರೆ, ಸರ್ಕಾರವು ಹಾಲು ಉತ್ಪಾದಕರಿಗೆ ವಿಷ ನೀಡುವ ಕೆಲಸ ಮಾಡುತ್ತಿದೆ. ಅಧಿಕಾರ, ಮತಕ್ಕೋಸ್ಕರ ಖಜಾನೆಯಲ್ಲಿರುವ ದುಡ್ಡನ್ನು ಬೇಡದೆ ಇರುವ ಖಾತೆಗೆ ಹಾಕಲಾಗುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮಾತನಾಡಿ, ಚಾರ್ಟರ್ ವಿಮಾನದಲ್ಲಿ ದೆಹಲಿಗೆ ಸಚಿವ ಜಮೀರ್ ಅಹ್ಮದ್ ಅವರ ಜೊತೆ ತೆರಳುವ ಮುಖ್ಯಮಂತ್ರಿಗಳಿಗೆ ಹಾಲಿನ ಪ್ರೋತ್ಸಾಹಧನ ನೀಡಲು ಮನುಷ್ಯತ್ವ ಇಲ್ಲ. ಸರ್ಕಾರದ ವಿರುದ್ಧ ಜಾನುವಾರುಗಳು ತಿರುಗಿ ಬಿದ್ದಿವೆ. ಜಾನುವಾರುಗಳಿಗೆ ಪಶು ಆಸ್ಪತ್ರೆಗಳಿಲ್ಲ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪಶು ಆಸ್ಪತ್ರೆಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡುವ ಮುಖಾಂತರ ಬೆಂಗಳೂರಿನಲ್ಲಿ ಹಾಲು ಉತ್ಪಾದಕರೂ ಮತ್ತು ಹಾಲು ಕೊಡುವ ಗೋವುಗಳು ಇರಬಾರದು ಎಂಬ ಗೋ ವಿರೋಧಿ ನಿಲುವನ್ನು ಸರ್ಕಾರ ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಬಾಗವಹಿಸಿದ್ದರು.