ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸರ್ಕಾರ ವಿವಿಧ ಕ್ಷೇತ್ರಗಳಿಗೆ ಸಾವಿರಾರು ಕೋಟಿ ರು. ಬಾಕಿ ಉಳಿಸಿಕೊಂಡಿದೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡಲು ಹಣವಿಲ್ಲದ ಪರಿಸ್ಥಿತಿಯಲ್ಲೂ ಹೊಸ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತಿದೆ.

ಬೆಂಗಳೂರು : ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಗುರುವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಶವಯಾತ್ರೆ’ ನಡೆಸಲು ರಾಜ್ಯ ಬಿಜೆಪಿಯು ನಿರ್ಧರಿಸಿದೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸರ್ಕಾರ ವಿವಿಧ ಕ್ಷೇತ್ರಗಳಿಗೆ ಸಾವಿರಾರು ಕೋಟಿ ರು. ಬಾಕಿ ಉಳಿಸಿಕೊಂಡಿದೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡಲು ಹಣವಿಲ್ಲದ ಪರಿಸ್ಥಿತಿಯಲ್ಲೂ ಹೊಸ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆಯನ್ನು ಖಂಡಿಸಿ ಪಕ್ಷದ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ‘ದಿವಾಳಿ ಸರ್ಕಾರದ ಶವಯಾತ್ರೆ’ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ನಿರ್ವಹಿಸದೆ ರೈತರು, ಗುತ್ತಿಗೆದಾರರು, ಸಾರಿಗೆ ಸಂಸ್ಥೆಗಳು, ಆರೋಗ್ಯ ಸಿಬ್ಬಂದಿ, ಅತಿಥಿ ಶಿಕ್ಷಕರು ಸೇರಿದಂತೆ ವಿವಿಧ ವರ್ಗಗಳಿಗೆ ಹಣ ಬಾಕಿ ಉಳಿಸಿರುವ ಸರ್ಕಾರದ ವಿರುದ್ಧ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಹಣಕಾಸು ಇಲಾಖೆಯೇ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ

ಇದೇ ತಿಂಗಳ 17ರಂದು ಹಣಕಾಸು ಇಲಾಖೆಯೇ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ರಾಜ್ಯದ ಆರ್ಥಿಕ ಪರಿಸ್ಥಿತಿಯ ಗಂಭೀರತೆಯನ್ನು ಬಯಲಿಗೆಳೆದಿದೆ. ಹೊಸ ಯೋಜನೆಗಳಿಗೆ ಹಣಕಾಸು ಒದಗಿಸುವುದು ಕಷ್ಟವಾಗಿದ್ದು, ರಾಜ್ಯದ ಸಾಲ ಮಾಡುವ ಸಾಮರ್ಥ್ಯವನ್ನು ಈಗಾಗಲೇ ಬಹುತೇಕ ಬಳಸಿಕೊಳ್ಳಲಾಗಿದೆ ಎಂಬ ಎಚ್ಚರಿಕೆಯನ್ನು ಹಣಕಾಸು ಇಲಾಖೆ ನೀಡಿದೆ ಎಂದರು.

ಇದು ಸಾಮಾನ್ಯ ಪತ್ರವಲ್ಲ

ಇದು ಸಾಮಾನ್ಯ ಪತ್ರವಲ್ಲ. ರಾಜ್ಯದ ಹಣಕಾಸಿನ ಸ್ಥಿತಿಯ ಕುರಿತು ಸರ್ಕಾರದ ಸ್ವಂತ ಇಲಾಖೆಯೇ ನೀಡಿರುವ ಗಂಭೀರ ಎಚ್ಚರಿಕೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಆಗ್ರಹಿಸಿದರು.