ಸಾರಾಂಶ
ನವದೆಹಲಿ : ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಹಾಗೂ ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಕೊಡಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸಂಸದ ಗೋವಿಂದ ಕಾರಜೋಳ ಅವರೊಂದಿಗೆ ಸಚಿವರನ್ನು ಭೇಟಿಯಾದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ ವರ್ಷ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ 5,300 ಕೋಟಿ ರುಪಾಯಿಯನ್ನು ಮಂಜೂರು ಮಾಡುವಂತೆ ಸಚಿವರಿಗೆ ತಿಳಿಸಿದ್ದೇವೆ. ಪ್ರಸ್ತುತ ಯೋಜನೆ ವಿಷಯ ಕೇಂದ್ರ ಸಚಿವ ಸಂಪುಟದ ಮುಂದೆ ಇದ್ದು, ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕಿದೆ ಎಂದರು.
ಏನಿದು ಭದ್ರಾ ಯೋಜನೆ?: ಕರ್ನಾಟಕದ ಬರ ಪೀಡಿತ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರುಣಿಸುವ ಮಹತ್ವದ ನೀರಾವರಿ ಯೋಜನೆ ಇದಾಗಿದ್ದು, ಮೊದಲ ಹಂತದಲ್ಲಿ ತುಂಗಾ ನದಿಯಿಂದ 17.40 ಟಿಎಂಸಿ ನೀರನ್ನು ಭದ್ರಾ ಜಲಾಶಯಕ್ಕೆ ಲಿಫ್ಟ್ ಮಾಡಿ. ಎರಡನೇ ಹಂತದಲ್ಲಿ ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು 4 ಬರ ಪೀಡಿತ ಜಿಲ್ಲೆಗಳ 2,55,515 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಅಲ್ಲದೆ, ಯೋಜನೆಯ ಅಡಿಯಲ್ಲಿ ಸುಮಾರು 367 ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಉದ್ದೇಶವಿದೆ.