ಬೆಂಗಳೂರು : ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.

ಉಪಚುನಾವಣೆ ಗೆಲುವಿನ ಬಗ್ಗೆ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತದಾನ ಮಾಡಿ ಗೆಲ್ಲಿಸಿದ ಸಮಸ್ತ ಮತದಾರ ಬಂಧುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದು ನಮ್ಮ ಸರ್ಕಾರದ ಸಾಧನೆಗಳಿಗೆ ಮತ್ತು ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಸಿಕ್ಕ ಜಯವಾಗಿದೆ ಎಂದು ಬಣ್ಣಿಸಿದ್ದಾರೆ.

ವಿರೋಧಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವ

ವಿರೋಧಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತಚಲಾಯಿಸಿದ್ದಾರೆ. ಈ ಎರಡೂ ಕ್ಷೇತ್ರಗಳ ಮತದಾರರಷ್ಟೇ ಅಲ್ಲ, ಇಡೀ ರಾಜ್ಯದ ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ರಾಜ್ಯದ ಮತದಾರರು ಇದೇ ರೀತಿ ನಮ್ಮನ್ನು ಹರಸುತ್ತಾರೆ ಎಂಬ ನಂಬಿಕೆ ನಮಗೆ ಇದೆ ಎಂದು ಹೇಳಿದ್ದಾರೆ.


ಕೇರಳದಲ್ಲಿ ನಿರೀಕ್ಷಿತ, ತ.ನಾಡಿನದ್ದು ಅನಿರೀಕ್ಷಿತ ಫಲಿತಾಂಶ: ಸಿದ್ದರಾಮಯ್ಯ

ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ನಿರೀಕ್ಷಿತ ಗೆಲುವು ದೊರಕಿದೆ. ಆದರೆ, ತಮಿಳುನಾಡಿನದ್ದು ಅನಿರೀಕ್ಷಿತ ಫಲಿತಾಂಶ. ಇನ್ನು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪ್ರಜಾಪ್ರಭುತ್ವ ವ್ಯವಸ್ಥೆಯ ಸೋಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿವಿಧ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಪತ್ರಿಕಾ ಹೇಳಿಕೆ ಮೂಲಕ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶ ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.