ಮುಡಾ ದಿಕ್ಕುತಪ್ಪಿಸಲು ಜಾತಿಗಣತಿ: ಎಚ್‌ಡಿಕೆ - ಹಗರಣದಿಂದ ಗಮನ ಬೇರೆಡೆ ಸೆಳೆವ ತಂತ್ರ

| Published : Oct 08 2024, 05:15 AM IST

HD Kumaraswamy

ಸಾರಾಂಶ

ಮುಡಾ ಹಗರಣದಿಂದ ಜನತೆಯ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿ ವಿಷಯವನ್ನು ಮುನ್ನೆಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 ಬೆಂಗಳೂರು :  ಮುಡಾ ಹಗರಣದಿಂದ ಜನತೆಯ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿ ವಿಷಯವನ್ನು ಮುನ್ನೆಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸೋಮವಾರ ಜೆ.ಪಿ.ನಗರ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡಲಾಗುತ್ತದೆ. ಈಗ ಮುಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತರಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂತರಾಜು ಆಯೋಗ ರಚನೆ ಮಾಡಿ 10 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ಹಲವು ಬೆಳವಣಿಗೆಗಳು ನಡೆದಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ. ಆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ವರದಿಯಿಂದ ಯಾರಿಗೂ ಉಪಯೋಗವಿಲ್ಲ:

ಜಾತಿಗಣತಿ ವರದಿಯನ್ನಿಟ್ಟುಕೊಂಡು ಮುಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲವಾಗುವುದಿಲ್ಲ. ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ತಪ್ಪುಗಳನ್ನು ಮುಚ್ಚಿಕೊಳ್ಳಲು ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ:

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡಲಾಗುತ್ತಿದ್ದು, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಲಿ ನೋಡೋಣ. ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಬಹುದು. ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆ ಎದುರಿಸಲಿ ಎಂದು ಕಾಂಗ್ರೆಸ್‌ ನಾಯಕರಿಗೆ ಸವಾಲು ಹಾಕಿದರು.