ಮುಡಾ, ವಾಲ್ಮೀಕಿ ಕೇಸ್‌ ಬಗ್ಗೆ ವರಿಷ್ಠರಿಗೆ ಇಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿವರಣೆ?

| Published : Jul 30 2024, 01:33 AM IST / Updated: Jul 30 2024, 05:01 AM IST

ಮುಡಾ, ವಾಲ್ಮೀಕಿ ಕೇಸ್‌ ಬಗ್ಗೆ ವರಿಷ್ಠರಿಗೆ ಇಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿವರಣೆ?
Share this Article
  • FB
  • TW
  • Linkdin
  • Email

ಸಾರಾಂಶ

 ಬಜೆಟ್‌ನಲ್ಲಿ  ಕಡಿಮೆ ಅನುದಾನ ನೀಡಿರುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಹಾಗೂ ಮುಡಾ ಹಾಗೂ ವಾಲ್ಮೀಕಿ ಹಗರಣ ವಿಚಾರಗಳ ಬಗ್ಗೆ ಎಐಸಿಸಿ ವರಿಷ್ಠರಿಗೆ ಸತ್ಯಾಂಶ ವಿವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌  ದೆಹಲಿಗೆ ತೆರಳಲಿದ್ದಾರೆ.

 ಬೆಂಗಳೂರು : ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಕಡಿಮೆ ಅನುದಾನ ನೀಡಿರುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಹಾಗೂ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದ ಮುಡಾ ಹಾಗೂ ವಾಲ್ಮೀಕಿ ಹಗರಣ ವಿಚಾರಗಳ ಬಗ್ಗೆ ಎಐಸಿಸಿ ವರಿಷ್ಠರಿಗೆ ಸತ್ಯಾಂಶ ವಿವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಂಗಳವಾರ ದೆಹಲಿಗೆ ತೆರಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಒಟ್ಟಿಗೆ ಪ್ರಯಾಣ ಬೆಳೆಸಲಿದ್ದು, ದೆಹಲಿ ಭೇಟಿ ವೇಳೆ ಕೇಂದ್ರ ಸಚಿವರು ಹಾಗೂ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಿ ಸರ್ಕಾರ ಹಾಗೂ ಪಕ್ಷದ ಬಗ್ಗೆ ಹಲವು ವಿಚಾರಗಳನ್ನು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಜು.23ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ. ಯಾವುದೇ ವಿಶೇಷ ಅನುದಾನ ಹಾಗೂ ಯೋಜನೆಗಳನ್ನು ಘೋಷಿಸಿಲ್ಲ ಎಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಇಲಾಖಾವಾರು ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದ ವಿಚಾರವಾಗಿ ಬಿಜೆಪಿ ಸಂಸದರು ಸಂಸತ್ತಿನಲ್ಲಿ ತೀವ್ರ ಸದ್ದು ಮಾಡಿದ್ದರು. ಹೀಗಾಗಿ ಈ ಬಗ್ಗೆ ವರಿಷ್ಠರಿಗೆ ವಿವರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ದೆಹಲಿಗೆ ತೆರಳುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದೂ ತಿಳಿದುಬಂದಿದೆ.

ಕೇಂದ್ರ ಸಚಿವರೊಂದಿಗೆ ಭೇಟಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈವರೆಗಿನ ವೇಳಾಪಟ್ಟಿ ಪ್ರಕಾರ ಮಂಗಳವಾರ ಬೆಳಗ್ಗೆ 11 ಗಂಟೆಗೆ ದೆಹಲಿಗೆ ತೆರಳಲಿದ್ದು, ರಾತ್ರಿ 11 ಗಂಟೆಗೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಎರಡು ದಿನಗಳ ಕಾಲ ದೆಹಲಿಯಲ್ಲೇ ಇರಲಿದ್ದಾರೆ. ಬುಧವಾರ ಮಧ್ಯಾಹ್ನ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ್‌ ಅವರೊಂದಿಗೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ.

ಬಳಿಕ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಮನೋಹರ್‌ಲಾಲ್‌ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.