ಇಂದು ಮೋದಿ - ಸಿದ್ದು ಭೇಟಿ : ಜಿಎಸ್‌ಟಿ ಸೇರಿ ಹಲವು ಚರ್ಚೆ - ಕಾಂಗ್ರೆಸ್‌ ನಾಯಕರೊಂದಿಗೂ ಸಭೆ

| Published : Nov 29 2024, 09:54 AM IST

siddaramaiah modi

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ದೆಹಲಿ ತಲುಪಿದ್ದು ಶುಕ್ರವಾರ ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ದೆಹಲಿ ತಲುಪಿದ್ದು ಶುಕ್ರವಾರ ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಚಿವ ಸಂಪುಟ ಸಭೆ ಮುಗಿದ ಬಳಿಕ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ ಅವರು ರಾತ್ರಿ 10.30ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದರು. ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್‌ಟಿ ಪಾಲು, ರೈಲ್ವೆ, ನೀರಾವರಿ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಅನುದಾನ ಕುರಿತು ಚರ್ಚೆ ನಡೆಸಲಿದ್ದಾರೆ.

ಬಳಿಕ ಮಧ್ಯಾಹ್ನ 2 ಗಂಟೆಗೆ ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಹೈಕಮಾಂಡ್‌ ನಾಯಕರೊಂದಿಗೆ ರಾಜ್ಯ ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ. ನಂತರ ಶುಕ್ರವಾರ ರಾತ್ರಿಯೇ ನಗರಕ್ಕೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.