ಸಾರಾಂಶ
ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿದ ಬಳಿಕ ಹೈಕೋರ್ಟ್‌ನಲ್ಲಿ ತಾವು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮುಡಾ ಹಗರಣ ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ನಡೆದ ಜನಾಂದೋಲನ ಸಮಾವೇಶದ ನಂತರ ಶ್ರಾವಣ ಶನಿವಾರ ಅಂಗವಾಗಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದ್ದರು. ಅದಾಗಿ ತಿಂಗಳ ಒಳಗಾಗಿ ಮತ್ತೊಂದು ಬಾರಿ ಮತ್ತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ದೇವಿಗೆ ಪೂಜೆ ಸಲ್ಲಿಸಿರುವುದು ವಿಶೇಷ.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಭೇಟಿ ನೀಡಿದ್ದರಿಂದ ದೇವಿ ದರ್ಶನ ಪಡೆದೆ ಎಂದು ಸಿದ್ದರಾಮಯ್ಯ ಎಷ್ಟೇ ಹೇಳಿಕೊಂಡರೂ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪು ತಮ್ಮ ಪರವಾಗಿರಲಿ ಎಂದು ಹಿತೈಷಿಗಳ ಸಲಹೆ ಮೇರೆಗೆ ಶಕ್ತಿದೇವತೆ ಎದುರು ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.
ಇದಕ್ಕಾಗಿ ಸೋಮವಾರ ಸಂಜೆಯೇ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ, ವಾಸ್ತವ್ಯ ಹೂಡಿದ್ದ ಅವರು ಮಂಗಳವಾರ ಅರಮನೆ ಎದುರು ಸುವರ್ಣ ಕರ್ನಾಟಕ ಕನ್ನಡ ರಥಕ್ಕೆ ಚಾಲನೆ ನೀಡಿ, ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪ್ರಾಧಿಕಾರದ ಸಭೆ ನಡೆಸಿ, ವಿಶೇಷ ವಿಮಾನದಲ್ಲಿಯೇ ಬೆಂಗಳೂರಿಗೆ ವಾಪಸಾದರು.
ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್, ರಾಮಲಿಂಗಾರೆಡ್ಡಿ, ಎಚ್.ಕೆ.ಪಾಟೀಲ್, ಶಾಸಕದಾದ ಜಿ.ಟಿ, ದೇವೇಗೌಡ, ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಕೆ.ಹರೀಶ್ ಗೌಡ, ಡಿ.ರವಿಶಂಕರ್, ಸಿ.ಎನ್.ಮಂಜೇಗೌಡ, ಕೆ.ವಿವೇಕಾನಂದ ಮೊದಲಾದವರು ಈ ವೇಳೆ ಇದ್ದರು.