ಸಾರಾಂಶ
ಕೃಷ್ಣರಾಜಪೇಟೆ : ಅಧಿಕಾರ ಹಸ್ತಾಂತರ ಕುರಿತು ಒಪ್ಪಂದ ಆಗಿದೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಏನೂ ಒಪ್ಪಂದವಾಗಿಲ್ಲ. ಆದರೆ, ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಧಿಕಾರ ಹಂಚಿಕೆ ಕುರಿತು ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂದರ್ಶನವೊಂದರಲ್ಲಿ ಹೇಳಿದ್ದರು.
ಶಿವಕುಮಾರ್ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಬುಧವಾರ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ, ಏನೂ ಒಪ್ಪಂದವಾಗಿಲ್ಲ, ಎಲ್ಲಿಯೂ ಒಪ್ಪಂದವಾಗಿಲ್ಲ. ಆದರೆ, ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು. ಜೊತೆಗೆ ಮಂತ್ರಿಮಂಡಲ ಪುನಾರಚನೆ ಮಾಡುತ್ತೇನೆ ಎಂದು ನಾನೆಲ್ಲೂ ಹೇಳಿಲ್ಲ. ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.