ಸಾರಾಂಶ
ಮಂಡ್ಯ ; ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನರು ಕೊಟ್ಟ ಅಧಿಕಾರವನ್ನು ಭ್ರಷ್ಟಾಚಾರ ನಡೆಸಲು ದುರ್ಬಳಕೆ ಮಾಡಿಕೊಂಡು ಜನರನ್ನು ವಂಚಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಅಹಿಂದ ಹೆಸರೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಕೊಟ್ಯಂತರ ರು. ಭ್ರಷ್ಟಾಚಾರ ಮಾಡಿ ಜನರಿಗೆ ಮೋಸ ಮಾಡಿದೆ. ಸ್ವತಃ ಮುಖ್ಯಮಂತ್ರಿಗಳೇ ಹಗರಣದಲ್ಲಿ ಭಾಗಿಯಾಗಿರುವುದರಿಂದ ತಮಗೆ ಅಧಿಕಾರ ಕೊಟ್ಟಿರುವ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲಾರಾಗಿದ್ದು, ಭ್ರಷ್ಟಾಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ಹಾಗಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಭಂಡ ಸರ್ಕಾರದಿಂದ ಜನರಿಗೆ ಒಳಿತಾಗುವುದಿಲ್ಲ. ಹಗರಣಗಳನ್ನು ಮುಚ್ಚಿ ಹಾಕಲು ರಾಜ್ಯ ಸರ್ಕಾರ ಹುನ್ನಾರ ನಡೆಸುತ್ತಿದೆ. ಪೊಲೀಸರ ಮೇಲೆ ನಮಗೆ ನಂಬಿಕೆ ಇದೆಯೇ ಹೊರತು ಸರ್ಕಾರದ ಮೇಲೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಬೇಕೆಂಬ ಉದ್ದೇಶದಿಂದಲೇ ಈ ಪಾದಯಾತ್ರೆ ನಡೆಸುತ್ತಿದ್ದು, ಸಿದ್ದರಾಮಯ್ಯ ಅಧಿಕಾರದಿಂದ ಕೆಳಗೆ ಇಳಿಯುವವರೆಗೂ ಈ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್‌ನವರು ಅಹಿಂದ ನಾಯಕ ಎಂದೇಳಿ ಅಧಿಕಾರಕ್ಕೆ ಬಂದರು. ಆದರೆ, ಆ ಸಮುದಾಯದ ಹಣವನ್ನು ಲೂಟಿ ಮಾಡಿದ್ದಾರೆ, ಜೊತೆಗೆ ಬಡವರು, ದಲಿತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದ ಕಾಲದಲ್ಲಿಯೂ ಸಿದ್ದರಾಮಯ್ಯ ಸರ್ಕಾರವಿತ್ತು, ಅಂದು ಕುಮಾರಸ್ವಾಮಿಯವರು ರೈತ ಕುಟುಂಬಗಳ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿ ಸಹಾಯ ಹಸ್ತ ನೀಡಿದ್ದರು. ಕೊಟ್ಟ ಮಾತಿನಂತೆ ನಡೆದುಕೊಂಡು ರೈತರ ಸಾಲ ಮನ್ನಾ ಮಾಡಿದ್ದರು ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.
ಈಗ ಮಂಡ್ಯ ಸಂಸದರಾಗಿ ಆಯ್ಕೆಯಾಗಿರುವ ಕುಮಾರಸ್ವಾಮಿ ಅವರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಕೈಗಾರಿಕೆ ಸ್ಥಾಪನೆಗೆ ಚಿಂತನೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗೆ ಸೇರಿದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಸುಳ್ಳು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಸರ್ಕಾರ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ. ವರ್ಗಾವಣೆಗೆ 40 ಲಕ್ಷ ರು. ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಪಿಎಸ್ಐಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಸಾಕ್ಷಿಯಲ್ಲವೇ ಎಂದು ಟೀಕಿಸಿದರು.