ಸಾರಾಂಶ
ಕನ್ನಡಪ್ರಭ ವಾರ್ತೆ ನವದೆಹಲಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಚಿವರು ಪಕ್ಷ ತಮಗೆ ನೀಡಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿ ಪಕ್ಷಕ್ಕೆ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರಲು ವಿಫಲವಾದರೆ ಅಂತಹ ಸಚಿವರ ತಲೆದಂಡ ಆಗಲಿದೆ ಎಂದು ಹೈಕಮಾಂಡ್ ಎಚ್ಚರಿಕೆ ನೀಡಿದೆ.ಅಲ್ಲದೆ, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಲು ಹಿರಿತನವೇ ಮಾನದಂಡ ಎಂಬ ಅಪನಂಬಿಕೆ ಬೇಡ. ಪಕ್ಷ ಹಾಗೂ ಸರ್ಕಾರದ ಪರವಾಗಿ ನಿಷ್ಠೆಯಿಂದ ಕೆಲಸ ಮಾಡಿ ಚುನಾವಣೆಯಲ್ಲಿ ಪಕ್ಷದ ಪರ ಫಲಿತಾಂಶಕ್ಕೆ ಕಾರಣವಾಗುವ ಕಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ನೀಡಲಾಗುವುದು ಎಂಬ ಸಂದೇಶವನ್ನೂ ರವಾನಿಸಿದೆ.ದೆಹಲಿಯ ಎಐಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕರ್ನಾಟಕ, ತೆಲಂಗಾಣ, ಕೇರಳ, ಆಂಧ್ರಪ್ರದೇಶ ರಾಜ್ಯಗಳ ಕ್ಷೇತ್ರ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದ ಸಚಿವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸಭೆಯಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ವಾರ್ ರೂಂ ಚಟುವಟಿಕೆ ಕುರಿತು ಮಾಹಿತಿ ನೀಡುವ ಜತೆಗೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ತಕ್ಷಣದಿಂದಲೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಅಗತ್ಯ ಕೆಲಸಗಳನ್ನು ಪ್ರಾರಂಭಿಸಬೇಕು. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸದಂತೆ ಮಾಡದೆ ಈ ಕ್ಷಣದಿಂದಲೇ ನಿಮ್ಮ ಜವಾಬ್ದಾರಿಗಳನ್ನು ನಿಭಾಯಿಸಬೇಕು. ನೀವು ಸ್ವಲ್ಪ ನಿರ್ಲಕ್ಷ್ಯವಹಿಸಿದರೂ ಪಕ್ಷಕ್ಕೆ ಭಾರಿ ನಷ್ಟ ಆಗಲಿದೆ. ಪಕ್ಷಕ್ಕಾಗಿ ನಿಮ್ಮ ಶ್ರಮ ಇಲ್ಲದಿದ್ದರೆ ನೀವು ಸಚಿವರಾಗಿದ್ದು ಪ್ರಯೋಜನವೇನು? ಹೀಗಾಗಿ ನೀವೂ ಸಹ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕಿರಿಯ ಶಾಸಕರಿಗೂ ಸಚಿವ ಸ್ಥಾನ:ಕಾಂಗ್ರೆಸ್ ಪಕ್ಷದಲ್ಲಿ 4-5 ಬಾರಿ ಗೆದ್ದಿರುವ ಹಿರಿಯ ಶಾಸಕರಿಗಷ್ಟೇ ಸಚಿವ ಸ್ಥಾನ ಎಂಬ ತಪ್ಪು ಕಲ್ಪನೆ ಇದೆ. ನಾವೂ ಸಹ ಬಿಜೆಪಿಯವರಂತೆ ಒಂದೆರಡು ಬಾರಿ ಗೆದ್ದ ಕಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬಹುದು.ಇದಕ್ಕಾಗಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀಡಿರುವ ಜವಾಬ್ದಾರಿಗಳನ್ನು ಸೂಕ್ತವಾಗಿ ನಿಭಾಯಿಸಬೇಕು. ಪಕ್ಷ ಹಾಗೂ ಸರ್ಕಾರದ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗುವಂತೆ ನಡೆದುಕೊಳ್ಳುವವರು ಕಿರಿಯ ಶಾಸಕರಾಗಿದ್ದರೂ ಸಚಿವ ಸ್ಥಾನ ನೀಡಲಾಗುವುದು. ಜವಾಬ್ದಾರಿ ನಿರ್ವಹಣೆಯಲ್ಲಿ ವಿಫಲವಾದ ಸಚಿವರು ಹಿರಿಯರಾಗಿದ್ದರೂ ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂದಿರುವುದಾಗಿ ತಿಳಿದು ಬಂದಿದೆ.